ನ್ಯೂಸ್

ಪವಿತ್ರ ಮಣ್ಣು ಸಂಗ್ರಹ ಅಭಿಯಾನ ಯಶಸ್ವಿಗೆ ಡಿಸಿ ಮನವಿ

ಶಿವಮೊಗ್ಗ: ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಣ್ಣು ಸಂಗ್ರಹ ಅಭಿಯಾನಕ್ಕೆ ಅ.28ರಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ಚಾಲನೆ ನೀಡಲಿದ್ದು, ಅಭಿಯಾನದ ಯಶಸ್ವಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಡಿಸಿ ಡಾ. ಆರ್.ಸೆಲ್ವಮಣಿ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಅಭಿಯಾನದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ತಾಲೂಕು ಕೇಂದ್ರಗಳು, ಆಯ್ದ ಗ್ರಾಮಗಳಲ್ಲಿ ಅಭಿಯಾನದ ಕೆಂಪೇಗೌಡ ರಥ ಸಂಚರಿಸಲಿದ್ದು ಸ್ಥಳೀಯವಾಗಿ ರಥವನ್ನು ಸ್ವಾಗತಿಸಬೇಕು ಎಂದರು.

ಈ ಸಂದರ್ಭದಲ್ಲಿ ರಥವನ್ನು ಆಯಾ ಭಾಗದ ಚುನಾಯಿತ ಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಪ್ರಗತಿಪರ ರೈತರು, ಧಾರ್ಮಿಕ ಮುಖಂಡರು ಸೇರಿದಂತೆ ಸಾರ್ವಜನಿಕರು ಸ್ವಾಗತಿಸಲು ಕ್ರಮ ಕೈಗೊಳ್ಳಬೇಕು. ಕೆರೆ, ನದಿ, ಪುಣ್ಯ ಕ್ಷೇತ್ರ, ಐತಿಹಾಸಿಕ ತಾಣಗಳಿಂದ ಸಂಗ್ರಹಿಸಿದ ಮಣ್ಣನ್ನು ಈಗಾಗಲೇ ಒದಗಿಸಿರುವ ಚೀಲದಲ್ಲಿ ತುಂಬಿ ಊರ ಪ್ರಮುಖರ ಸಮ್ಮುಖದಲ್ಲಿ ಹಸ್ತಾಂತರಿಸಬೇಕು ಎಂದು ಹೇಳಿದರು.

ಕೆಂಪೇಗೌಡ ರಥ ಸಂಚರಿಸುವ ಮಾರ್ಗದ ನಕ್ಷೆಯನ್ನು ಈಗಾಗಲೇ ಸಿದ್ಧಪಡಿಸಿದ್ದು, ಅಭಿಯಾನದ ಯಶಸ್ವಿಗೆ ತಾಲೂಕುಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಎಲ್ಲ 262 ಗ್ರಾಪಂಗಳು, 9 ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಣ್ಣನ್ನು ಸಂಗ್ರಹಿಸಲು ಸೂಚಿಸಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಅ.28ರಂದು ಮಧ್ಯಾಹ್ನ 3ಕ್ಕೆ ಡಿಸಿ ಕಚೇರಿ ಆವರಣದಲ್ಲಿ ಕೆಂಪೇಗೌಡ ರಥಕ್ಕೆ ಚಾಲನೆ ನೀಡುವರು. ನ. 5ರಂದು ಡಿಸಿ ಕಚೇರಿ ಆವರಣದಲ್ಲಿ ಜಿಲ್ಲೆಯ ಎಲ್ಲ ಕಡೆಗಳಿಂದ ಸಂಗ್ರಹಿಸಿದ ಮಣ್ಣನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಲಾಗುವುದು ಎಂದು ಹೇಳಿದರು. ಜಿಪಂ ಸಿಇಒ ಎನ್.ಡಿ.ಪ್ರಕಾಶ್, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.