ಹೊಸನಗರದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಸಾರ್ವಜನಿಕರ ಅರ್ಜಿ ಸ್ವೀಕರಿಸಿದರು. ಗೋಪಾಲಕೃಷ್ಣ ಬೇಳೂರು, ಗುರುದತ್ತ ಹೆಗಡೆ ಇತರರಿದ್ದರು.  
ನ್ಯೂಸ್

ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಜನಸ್ಪಂದನ

ಹೊಸನಗರ: ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಿದ್ದು, ಮುಖ್ಯಮಂತ್ರಿ ಸಹ ಬೇರೆ ಬೇರೆಗಳಲ್ಲಿ ಜನಸ್ಪಂದನ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಈಡಿಗರ ಸಭಾಭವನದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರ ಸಮಸ್ಯೆಗಳನ್ನು ಆಲಿಸಿ ಶೀಘ್ರ ಪರಿಹಾರ ದೊರಕಿಸಲು ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಬದಲಾವಣೆ ತರಲು ಜನಸ್ಪಂದನ ಕಾರ್ಯಕ್ರಮ ಅಗತ್ಯ ಎಂದು ತಿಳಿಸಿದರು.

ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿರುವ ಕಾರಣ ಏಕಕಾಲದಲ್ಲಿ ಸಮಸ್ಯೆ ಆಲಿಸಿ ಕಾನೂನು ಪ್ರಕಾರ ಅನ್ವಯಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು. ಆಡಳಿತ ಸುಧಾರಣೆಗೆ ನೆರವಾಗುವ ಇಂತಹ ಕಾರ್ಯಕ್ರಮಗಳಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಚರ್ಚಿಸಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡೋಣ ಎಂದು ಸಲಹೆ ನೀಡಿದರು.

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ನೇರವಾಗಿ ಮಾತನಾಡಿ ಇತ್ಯರ್ಥಪಡಿಸಲು ಇಡೀ ಜಿಲ್ಲಾಡಳಿತ ನೆರವಾಗಲಿದೆ. ಮುಕ್ತ ಚರ್ಚೆ ನಡೆದು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಉತ್ತಮ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.

ಪಪಂ ಅಧ್ಯಕ್ಷ ನಾಗಪ್ಪ, ಪಪಂ ಉಪಾಧ್ಯಕ್ಷೆ ಚಂದ್ರಕಲಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚಿದಂಬರ, ಡಿಸಿ ಗುರುದತ್ತ ಹೆಗಡೆ, ಎಸ್ಪಿ ಮಿಥುನ್‌ಕುಮಾರ್, ಎಡಿಸಿ ಸಿದ್ದಲಿಂಗ ರೆಡ್ಡಿ, ಜಿಪಂ ಉಪಕಾರ್ಯದರ್ಶಿ ಜಯಲಕ್ಷ್ಮೀ, ಸಾಗರ ಉಪವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್‌ಕುಮಾರ್, ಹೊಸನಗರ ಪ್ರಭಾರ ಎಸಿ ರಶ್ಮಿ, ಪಪಂ, ಗ್ರಾಪಂಗಳ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಹಾಜರಿದ್ದರು.