ತೀರ್ಥಹಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ, ಬಡವರ ಕಲ್ಯಾಣ ಕಾರ್ಯಕ್ರಮಗಳಿಂದ ದೇಶ ಸುಭದ್ರವಾಗಿದೆ ಎಂದು ಮಂಡಲ ಬಿಜೆಪಿ ಅಧ್ಯಕ್ಷ ನವೀನ್ ಹೆದ್ದೂರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ಯುವ ಮೋರ್ಚಾದಿಂದ ಪಟ್ಟಣದ ಕೆಟಿಕೆ ಕಲ್ಯಾಣ ಮಂದಿರದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಮೋದಿ ಅವರ ಜನ್ಮದಿನದ ಅಂಗವಾಗಿ ಅ.2ರವರೆಗೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ. ಸ್ವಚ್ಛತೆ, ರಕ್ತದಾನ, ಪ್ರಬುದ್ಧರ ಗೋಷ್ಠಿ, ಮಹಿಳೆಯರಿಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಸೆ.25ರಂದು ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನ ಆಚರಿಸಲಾಗುವುದು ಎಂದು ತಿಳಿಸಿದರು.
ನೂರು ಮಂದಿ ರಕ್ತದಾನ ಮಾಡಿದರು. ಪುರಸಭೆ ಮಾಜಿ ಅಧ್ಯಕ್ಷ ಡಾ. ಟಿ.ನಾರಾಯಣಸ್ವಾಮಿ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂತೋಷ್ ದೇವಾಡಿಗ, ಪಪಂ ಸದಸ್ಯ ಸಂದೇಶ್ ಜವಳಿ, ಜ್ಯೋತಿ ಮೋಹನ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ, ರಕ್ಷಿತ್ ಮೇಗರವಳ್ಳಿ, ಯಶಸ್ವಿ ಕಡ್ತೂರು ಇತರರಿದ್ದರು.