ಕೋಲಾರ: ಜಿಲ್ಲೆಯಲ್ಲಿ ಎಣ್ಣೆ ಕಾಳುಗಳ ಉತ್ಪಾದನೆ ಹೆಚ್ಚು ಮಾಡುವ ಜತೆಗೆ ಪಾರಂಪರಿಕ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆಯಲು ಹೆಚ್ಚಿನ ಒತ್ತು ನೀಡುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸಾವಯವದ ಮೂಲಕ ಬೆಳೆದ ಬೆಳೆಗಳಿಗೆ ವಿಶ್ವ ಮಟ್ಟದಲ್ಲಿ ಹೆಚ್ಚಿನ ಬೇಡಿಕೆಯಿದೆ. ಬೇವಿನಸೊಪ್ಪಿನ ಬೆಳೆ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಯೋಜನೆಗಳು ಹಾಗೂ ನೂತನ ತಂತ್ರಜ್ಞಾದ ಬಗ್ಗೆ ಗ್ರಾಪಂ, ಗ್ರಾಮ ಸಭೆಗಳಲ್ಲಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು, ಫ್ರೂಟ್ಸ್ ಕಾರ್ಯಕ್ರಮದಡಿ ಶೇ.100 ರೈತರನ್ನು ನೋಂದಾಯಿಸಬೇಕು. ಜಿಲ್ಲೆಯಲ್ಲಿ ನಕಲಿ ಬಿತ್ತನೆ ಬೀಜ, ಕೀಟನಾಶಕ ಹಾಗೂ ರಸಗೊಬ್ಬರ ಮಾರಾಟ ಮಾಡುವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕಿ ವಿ.ಡಿ. ರೂಪದೇವಿ ಮಾತನಾಡಿ, ಜಿಲ್ಲೆಯಲ್ಲಿ ಬಿತ್ತನೆ ಪ್ರದೇಶ 2,09 566 ಹೆಕ್ಟೇರ್, ಕೃಷಿ ಬೆಳೆಗಳ ವಿಸ್ತೀರ್ಣ 97,900 ಹೆಕ್ಟೇರ್, ತೋಟಗಾರಿಕೆ ಬೆಳೆಗಳ ವಿಸ್ತೀರ್ಣ 1 ಲಕ್ಷ ಹೆಕ್ಟೇರ್, ರೇಷ್ಮೆ ಬೆಳೆ ವಿಸ್ತೀರ್ಣ 19,329 ಹೆಕ್ಟೇರ್ ಪ್ರದೇಶವಿದೆ. ಜಿಲ್ಲೆಯಲ್ಲಿ ಒಟ್ಟು 8,19,509 ಜಾನುವಾರುಗಳಿವೆ. ಕಳೆದ 2 ವಷರ್ಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಫ್ರೂಟ್ಸ್ ಯೋಜನೆಯಲ್ಲಿ ಜಿಲ್ಲೆಯ 1,94,343 ರೈತರು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾತನಾಡಿ, ಜಿಲ್ಲೆಯಲ್ಲಿ ಕೆ.ಸಿ.ವ್ಯಾಲಿ ನೀರಿನಿಂದ ತುಂಬಾ ಕೆರೆಗಳು ತುಂಬಿವೆ. ಮಳೆ ಕಾರಣದಿಂದ 200 ಎಕರೆಗೂ ಅಧಿಕ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಎಪಿಎಂಸಿ ಮಾರುಕಟ್ಟೆಗೆ ಜಾಗ ಗುರುತಿಸಲಾಗಿದೆ ಎಂದರು. ಜಿಪಂ ಸಿಇಒ ಉಕೇಶ್ ಕುಮಾರ್, ಕುಡಾ ಅಧ್ಯಕ್ಷ ಓಂಶಕ್ತಿ ಚಲಪತಿ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕೃಷಿ ಯಂತ್ರೋಪಕರಣಗಳ ಸಹಾಯಧನ ಯೋಜನೆಯಲ್ಲಿ ಹೆಚ್ಚಿನ ಫಲಾನುಭವಿಗಳಿಗೆ ನೀಡಿ. ಹೋಬಳಿಯ ಮಟ್ಟದಲ್ಲಿ ಶೈತ್ಯಾಗಾರಗಳನ್ನು ಸ್ಥಾಪಿಸಬೇಕು. ದೇಶದಲ್ಲಿ ಯಾವ ರಾಜ್ಯದಲ್ಲಿ ಯಾವ ರೀತಿಯ ಬೆಳೆೆಯನ್ನು ಬೆಳೆಯುತ್ತಿದ್ದಾರೆ ಯಾವ ಬೆಳೆಗೆ ಬೇಡಿಕೆ ಹೆಚ್ಚಿದೆ ಎಂಬುವುದರ ಮಾಹಿತಿಯನ್ನು ರೈತರಿಗೆ ನೀಡಬೇಕು. ಎಸ್.ಮುನಿಸ್ವಾಮಿ, ಸಂಸದ