ನ್ಯೂಸ್

'ದೆಹಲಿಯಲ್ಲೊಬ್ಬರು ಪಾಳೆಯಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ'! ರಾತ್ರಿ ಕರ್ಫ್ಯೂ ನಾಟಕ ಎಂದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಸರ್ಕಾರ ಹಲವು ನಗರಗಳಲ್ಲಿ ವಿಧಿಸಿರುವ ರಾತ್ರಿ ಕರ್ಫ್ಯೂ ಬಗ್ಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. "ರಾತ್ರಿ ತೆರೆದಿರುವ ಹೋಟೆಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ ? ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ?" ಎಂದು ಸಿದ್ದು ಪ್ರಶ್ನಿಸಿದ್ದಾರೆ.

"ರಾಜ್ಯದ ಬಿಜೆಪಿ ಸರ್ಕಾರ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಲು ಕೈಗೊಂಡಿರುವ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯಲು ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಕರೆಯಷ್ಟೇ ಬಾಲಿಶವಾಗಿದೆ. ದೆಹಲಿಯಲ್ಲೊಬ್ಬರು ಪಾಳೆಯಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ, ಭಲೇ ಜೋಡಿ !" ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಛೆಯನ್ನು ಮುಖ್ಯಮಂತ್ರಿಗಳು ಹೊಂದಿದ್ದರೆ, ಮೊದಲು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದಿರುವ ಸಿದ್ದರಾಮಯ್ಯ, ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇ. 1 ರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನಹರಿಸಬೇಕು ಎಂದಿದ್ದಾರೆ.

"ದೇಶದ ಪ್ರಧಾನಿಯ ಅಂಧಾ ದರ್ಬಾರ್‌ನಿಂದ ರಾಜ್ಯದ ಮುಖ್ಯಮಂತ್ರಿಗಳು ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ, ನೀವು ಸ್ವಲ್ಪ ಬುದ್ದಿ ಕಲಿಯಿರಿ, ಅವರಿಗೂ ಸ್ವಲ್ಪ‌ ಬುದ್ದಿ ಹೇಳಿ" ಎಂದು ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ. (ಏಜೆನ್ಸೀಸ್)