ನ್ಯೂಸ್

ಖರ್ಗೆಗೆ ರಾಜ್ಯಸಭೆ ಟಿಕೆಟ್ ಕೊಡುವಂತೆ ಹೈಕಮಾಂಡ್‌ಗೆ ನಾನೇ ಶಿಫಾರಸು ಮಾಡಿದ್ದೆ: ಸಿದ್ದರಾಮಯ್ಯ

ಮೈಸೂರು: ರಾಜ್ಯಸಭಾ ಚುನಾವಣೆಗೆ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬೇಕೆಂದು ಹೈಕಮಾಂಡ್‌ಗೆ ನಾನೇ ಮನವಿ ಮಾಡಿದ್ದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಖರ್ಗೆ ಶಾಸಕರಾಗಿ, ಸಂಸದರಾಗಿ, ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಈ ಕಾರಣಕ್ಕೆ ಅವರನ್ನು ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕೆಂದು ಹೈಕಮಾಂಡ್‌ಗೆ ಮನವಿ ಮಾಡಿದ್ದೆ. ಈ ವಿಚಾರವಾಗಿ ಖರ್ಗೆ ಅವರೊಂದಿಗೂ ಮಾತನಾಡಿದ್ದೇನೆ. ಅವರೂ ಸ್ಪರ್ಧೆಗೆ ಸಹಮತ ವ್ಯಕ್ತಪಡಿಸಿದ್ದರು ಎಂದು ಸುದ್ದಿಗಾರರಿಗೆ ತಿಳಿಸಿದರು.

ಗೆಲುವು ಸಾಧಿಸಲು 46 ಮತಗಳ ಅವಶ್ಯಕತೆ ಇದೆ. ಆದರೆ, ನಮ್ಮ ಬಳಿ ಇರುವ ಹೆಚ್ಚುವರಿ ಮತಗಳನ್ನು ಯಾರಿಗೆ ಚಲಾಯಿಸಬೇಕೆಂಬ ಕುರಿತು ತೀರ್ಮಾನ ಕೈಗೊಂಡಿಲ್ಲ. ಈ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ. ಈ ವಿಚಾರವನ್ನು ಮಾಧ್ಯಮದ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧಿಸುವ ಸಾಧ್ಯತೆ ಇದೆ. ಅವರಿಗೆ ನಮ್ಮ ಪಕ್ಷದಿಂದ ಬೆಂಬಲ ನೀಡುವ ಕುರಿತು ಈವರೆಗೆ ಯಾವುದೇ ಚರ್ಚೆಯಾಗಲಿ, ತೀರ್ಮಾನವಾಗಲಿ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.