ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ(ಸಿಗಂದೂರು ಸೇತುವೆ ಉದ್ಘಾಟನೆ )ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು ಸಿಎಂ(CM) ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.
ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.
ಭಾರತೀಯ ಚಿತ್ರರಂಗದ ಖ್ಯಾತ ಚಿತ್ರನಟಿ ಬಿ.ಸರೋಜಾದೇವಿ ಅವರ ನಿಧನದ ಬಗ್ಗೆ ಸಂತಾಪ ಸೂಚಿಸುತ್ತಾ ಮಾತನಾಡಿದ ಮುಖ್ಯಮಂತ್ರಿಗಳು, ಬಿ.ಸರೋಜಾದೇವಿಯವರು ಕನ್ನಡ ನಾಡು ಕಂಡ ಪ್ರತಿಭಾವಂತ ಕಲಾವಿದರಾಗಿದ್ದರು. ಬಹುಭಾಷಾ ನಟಿಯಾಗಿದ್ದ ಅವರು ಅಪ್ರತಿಮ ಕಲಾವಿದರಾಗಿದ್ದು, ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.