ಬೆಂಗಳೂರು: ನೇಕಾರರಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ ತಿಳಿಸಿದರು.
ವಿಜಯನಗರ ಕಾಸಿಯಾ ಸಭಾಂಗಣದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ, ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕಾವೇರಿ ಹ್ಯಾಂಡ್ಲೂಮ್ಸ್, ನೇಕಾರರ ಸೇವಾ ಕೇಂದ್ರ ಹಾಗೂ ಕಾಸಿಯಾ ಜಂಟಿ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ 9ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ಕೈಮಗ್ಗ ನೇಕಾರರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ರಿಯಾಯಿತಿ ದರದಲ್ಲಿ ವಿದ್ಯುತ್ ನೀಡುವಂತೆ ನೇಕಾರರು ಸಲ್ಲಿಸಿದ್ದ ಮನವಿಗೆ ಮುಖ್ಯಂತ್ರಿ ಸಿದ್ದರಾಮಯ್ಯ ಸಕಾರತ್ಮಾಕವಾಗಿ ಸ್ಪಂದಿಸಿದ್ದಾರೆ. ನೇಕಾರರನ್ನು ಉಳಿಸುವ ಇಚ್ಚಾಶಕ್ತಿ ಸರ್ಕಾರ ಹೊಂದಿದೆ. ಮುಂದಿನ ದಿನಗಳಲ್ಲಿ ಪಾರಂಪರಿಕ ನೇಕಾರಿಕೆ ಜತೆಗೆ ವೈಜ್ಞಾನಿಕ ಪದ್ಧತಿಯಲ್ಲಿ ನೇಕಾರಿಕೆಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದರು.