ಭುವನೇಶ್ವರ್: ವ್ಯಾನ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಆರು ಮಂದಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಓಡಿಶಾದ ಸುಂದರ್ಗಢ್ ಜಿಲ್ಲೆಯಲ್ಲಿ ನಡೆದಿದೆ.
ಹೇಮಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಯಕನಪಾಲಿ ಪ್ರದೇಶದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ನಸುಕಿನ ಜಾವ ವ್ಯಾನ್, ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಜು ಕವಿದು ಗೋಚರತೆ ಕಡಿಮೆ ಇದ್ದಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಊಹಿಸಲಾಗಿದೆ.
ಮೃತರು ಸುಂದರ್ಗಢ್ ಜಿಲ್ಲೆಯ ಕಂದಗೋಡ ಮತ್ತು ಸಮರ್ಪಿಂಡ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.