ಡೆಹ್ರಾಡೂನ್: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) 6 ಮಂದಿ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ (Dehradun) ನಡೆದಿದೆ.
ಮೃತರ ಪೈಕಿ ಮೂವರು ಹುಡುಗರು, ಮೂವರು ಹುಡುಗಿಯರು ಎಂದು ಗುರುತಿಸಲಾಗಿದ್ದು, ಎಲ್ಲರೂ 20ರ ಆಸುಪಾಸಿನವರು ಎಂದು ಹೇಳಲಾಗಿದೆ. ಓರ್ವ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ಅಪಘಾತದ ಕುರಿತು ಮಾಹಿತಿ ನೀಡಿರುವ ಕೊತ್ವಾಲಿ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ನಮ್ಮ ಅಧಿಕಾರಿಗಳು ತಕ್ಷಣವೇ ಸ್ಥಳದಕ್ಕೇ ದೌಡಾಯಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ಧಾರೆ. ಅಪಘಾತದ ತೀವ್ರತೆಗೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎಂದು ಕೊತ್ವಾಲಿ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.