ಬಾಳೆಹೊನ್ನೂರಿನಲ್ಲಿ ನಡೆಯಲಿರುವ ಎನ್.ಆರ್.ಪುರ ತಾಲೂಕು ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದ ಆಹ್ವಾನ ಪತ್ರಿಕೆಯನ್ನು ಡಾ. ವೈ.ಎ.ಸುರೇಶ್ ಬಿಡುಗಡೆಗೊಳಿಸಿದರು. ಎಂ.ಕೆ.ಸುಂದರೇಶ್, ಉಮೇಶ್, ರಿಚರ್ಡ್, ರಾಜೇಶ್, ಪ್ರಭಾತ್ ಇದ್ದರು.  
ನ್ಯೂಸ್

ಸೆ.2ಕ್ಕೆ ಪಿಯು ಕಾಲೇಜುಗಳ ಕ್ರೀಡಾಕೂಟ

ಬಾಳೆಹೊನ್ನೂರು: ಎನ್.ಆರ್.ಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಸೆ.2ರಂದು ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜು ಆತಿಥ್ಯದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವೈ.ಎ.ಸುರೇಶ್ ತಿಳಿಸಿದರು.

ಬಿಜಿಎಸ್ ಪಿಯು ಕಾಲೇಜಿನಲ್ಲಿ ಎರಡು ದಿನಗಳ ಕ್ರೀಡಾಕೂಟ ನಡೆಯಲಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನವೇ ಸೆ.1ರಂದು ವಿವಿಧ ಕ್ರೀಡಾ ಸ್ಪರ್ಧೆಗಳು ಬಿಜಿಎಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
2ರಂದು ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸುವರು. ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಶಾಸಕ ಟಿ.ಡಿ.ರಾಜೇಗೌಡ, ರಾಜ್ಯಸಭೆ ಸದಸ್ಯ ಜೈರಾಂ ರಮೇಶ್, ಎಂಎಲ್‌ಸಿ ಎಸ್.ಎಲ್.ಬೋಜೇಗೌಡ, ಗ್ರಾಪಂ ಅಧ್ಯಕ್ಷ ಸದಾಶಿವ, ಉಪಾಧ್ಯಕ್ಷೆ ರಂಜಿತಾ ಇತರರು ಭಾಗವಹಿಸುವರು ಎಂದರು.
ಕ್ರೀಡಾಕೂಟದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. 800ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದು, 31 ವಿಭಾಗದಲ್ಲಿ ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಭಾಗವಹಿಸುವ ಕ್ರೀಡಾಪಟುಗಳಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಲು ಸಮಿತಿ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.
ಕಾಲೇಜು ಅಭಿವೃದ್ಧಿ ಸಲಹಾ ಸಮಿತಿ ಸದಸ್ಯ ಎಂ.ಕೆ.ಸುಂದರೇಶ್ ಗೌಡ, ಪ್ರಾಧ್ಯಾಪಕರಾದ ಎ.ವಿ.ಉಮೇಶ್, ರಿಚರ್ಡ್ ಮೆನೇಜಸ್, ಸಿ.ರಾಜೇಶ್, ಎಸ್.ಸಿ.ಪ್ರಭಾತ್ ಇತರರಿದ್ದರು.