ಬೆಂಗಳೂರು: ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ ಅವರನ್ನು ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ(Sri Siddarameshwar Award to Sanehalli Sri).
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗುವ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಪ್ರಸಕ್ತ ವರ್ಷ ಸಾಣೆಹಳ್ಳಿಯ ತರಳಬಾಳು ಶಾಖಾಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ತಮ್ಮ ಪರಿಶ್ರಮ, ಜನಪರ ಕಾಳಜಿ, ವೈಚಾರಿಕತೆ. ರಂಗಾಸಕ್ತಿ ಹಾಗೂ ಸಾಹಿತ್ಯ ಮತ್ತು ಸಾಂಸ್ಕೃತಿಕ ಒಲವುಗಳ ಮೂಲಕ ಜನಮಾನಸದಲ್ಲಿ ಮನೆ ಮಾಡಿದ್ದಾರೆ. ಅವರ ಜೀವನಾದರ್ಶಗಳನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಡಾ. ಮಲ್ಲಿಕಾ ಘಂಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿಯು ಈ ಆಯ್ಕೆ ಮಾಡಿದೆ. ಪ್ರಶಸ್ತಿ 5 ಲಕ್ಷ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಜ.14ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಶ್ರೀ ಸಿದ್ದರಾಮೇಶ್ವರ ಜಯಂತಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.