ಬೆಂಗಳೂರು: ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ ಸಂಬಂಧ ಹೈಕೋರ್ಟ್ ತೀರ್ಪಿಗೆ ಸುಪ್ರಿಂಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿ ಸಚಿವ ಸಂಪುಟದ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.
ನಮ್ಮ ನಾಯಕರಾದ ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ಅಹ್ಮದಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ಈ ಆದೇಶದಿಂದ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ದುರ್ಬಲರ ಪರವಾದ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ. ಸತ್ಯ ಮೇವ ಜಯತೇ.. ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿ ಅವರ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ. ದೇಶ ಹಾಗೂ ಜನರ ಹಿತಕ್ಕಾಗಿ ರಾಹುಲ್ ಗಾಂಧಿ ಅವರು ಎತ್ತುತ್ತಿರುವ ಧ್ವನಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ತೀರ್ಪು ಮಹತ್ವದ್ದಾಗಿದೆ ಎಂದರು.
ವಸತಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿ, ನ್ಯಾಯ ಯಾವಾಗಲೂ ಜಯಗಳಿಸುತ್ತದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಅವರ ಶಿಕ್ಷೆಗೆ ಸುಪ್ರಿಂ ತಡೆ ನೀಡಿದ್ದು, ಸಂಸದರಾಗಿ ಅವರ ಸ್ಥಾನಮಾನ ಮರುಸ್ಥಾಪಿತವಾಗಲಿದ್ದು, ಇದು ವಯನಾಡ್ ಮತ್ತು ಭಾರತಕ್ಕೆ ಭರವಸೆಯನ್ನು ತಂದಿದೆ ಎಂದು ಹೇಳಿದ್ದಾರೆ.
ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿ ಅವರ ಮೇಲಿನ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ತಡೆಯಾಜ್ಞೆ ಸ್ವಾಗತಾರ್ಹ. ಕೋರ್ಟ್ ತಡೆಯಾಜ್ಞೆ ನೀಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಗೆಲುವಾಗಿದೆ. ದ್ವೇಷದ ರಾಜಕಾರಣ ಸರಿಯಲ್ಲ ಎಂದು ಈ ತೀರ್ಪು ತೋರಿಸಿಕೊಟ್ಟಿದೆ. ವಿರೋಧ ಪಕ್ಷಗಳ ಧ್ವನಿ ಅಡಗಿಸುವ ಪ್ರಯತ್ನವನ್ನು ಯಾರೂ ಮಾಡಬಾರದು. ಕೂಡಲೇ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಮರಳಿ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.