ಅರಕಲಗೂಡು ತಾಲೂಕಿನ ಗರುಡನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ. ಮಂಜು ಭೂಮಿಪೂಜೆ ನೆರವೇರಿಸಿದರು. ದಿನೇಶ್, ಲಕ್ಷ್ಮೀಶ, ಸದಾನಂದ ಇತರರಿದ್ದರು.
ಅರಕಲಗೂಡು: ತಾಲೂಕಿನ ರಾಮನಾಥಪುರ ಹೋಬಳಿಯ ಗರುಡನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ. ಮಂಜು ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ, ಕಳೆದ ವರ್ಷ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ನಿಗದಿತ ಅನುದಾನದಲ್ಲಿ ರಸ್ತೆ ಕಾಮಗಾರಿ ಸಂಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಮಾಡಿದ್ದರಿಂದ ಈಗ ಹೆಚ್ಚುವರಿಯಾಗಿ 10 ಲಕ್ಷ ರೂ. ಅನುದಾನ ಮಂಜೂರು ಮಾಡಲಾಗಿದೆ. ಅದರಂತೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.
ಗ್ರಾಮದ ಪ್ರಮುಖ ರಸ್ತೆಯ ಅಭಿವೃದ್ಧಿಯಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಮುಖಂಡರಾದ ದಿನೇಶ್, ಲಕ್ಷ್ಮೀಶ, ಸದಾನಂದ ಹಾಗೂ ಗ್ರಾಮಸ್ಥರು ಇದ್ದರು.