ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಮೇಯರ್ ಪ್ರೀತಿ ಕಾಮಕರ, ಉಪಮೇಯರ್ ಹನುಮಂತ ಕೊಂಗಾಲಿ ಮನವಿ ಸಲ್ಲಿಸಿದರು.
ಬೆಳಗಾವಿ: ನಗರಕ್ಕೆ ಮೂಲ ಸೌಕರ್ಯ ಕಲ್ಪಿಸಲು, ಚಳಿಗಾಲದ ವಿಧಾನ ಮಂಡಲ ಅಧಿವೇಶನ ಖರ್ಚು ವೆಚ್ಚಕ್ಕಾಗಿ 250 ಕೋಟಿ ರೂ. ವಿಶೇಷ ಅನುದಾನ ಘೋಷಿಸಲು ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಮೇಯರ್ ಪ್ರೀತಿ ಕಾಮಕರ್, ಉಪಮೇಯರ್ ಹನುಮಂತ ಕೊಂಗಾಲಿ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.
ಸುವರ್ಣ ವಿಧಾನಸೌಧ ಸಭಾಂಗಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ನಗರ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಿಸಲು ವಿನಂತಿಸಿದರು.
ಪ್ರತಿ ವರ್ಷ ನಡೆಯುವ ಚಳಿಗಾಲ ವಿಧಾನ ಮಂಡಲ ಅಧಿವೇಶನದ ಖರ್ಚು-ವೆಚ್ಚಗಳನ್ನು ಮಹಾನಗರ ಪಾಲಿಕೆ ನಿರ್ವಹಣೆ ಮಾಡುತ್ತಿದೆ. ಆದರೆ, ವೇಗವಾಗಿ ಬೆಳೆಯುತ್ತಿರುವ ನಗರಕ್ಕೆ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಉದ್ಯಾನ, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದೇ ಸವಾಲಿನ ಕೆಲಸವಾಗಿದೆ.
ಕಚೇರಿ ಖರ್ಚು- ವೆಚ್ಚ, ಸಿಬ್ಬಂದಿ ವೇತನ ಹೀಗೆ ವಿವಿಧ ಕೆಲಸಗಳಿಗೆ ತೆರಿಗೆ ಆದಾಯದ ಮೇಲೆ ಅವಲಂಬಿತರಾಗಿದ್ದು, ಅಭಿವೃದ್ಧಿ ಕೆಲಸ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
ಮನವಿಗೆ ಸ್ಪಂದಿಸಿರುವ ಸಿಎಂ ಡಿ.ಕೆ.ಶಿವಕುಮಾರ, ಬೆಳಗಾವಿ ನಗರ ಸಮಗ್ರ ಅಭಿವೃದ್ಧಿ ಹಿತದೃಷ್ಟಿ ಹಾಗೂ ಜನರ ಅನುಕೂಲಕ್ಕಾಗಿ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಘೋಷಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮೇಯರ್, ಉಪಮೇಯರ್ ತಿಳಿಸಿದ್ದಾರೆ.