ರಾಯಚೂರು ಕಲ್ಯಾಣ ಕರ್ನಾಟಕ ಭಾಗದಲ್ಲಿ ದಿನೇದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ, ಶಾಲೆ ಹಾಗೂ ಕಾಲೇಜುಗಳ ಕಾರ್ಯಾವಧಿ ಸಮಯವನ್ನು ಬದಲಾವಣೆ ಮಾಡುವ ಕುರಿತು ಜಿಲ್ಲಾಧಿಕಾರಿ ನಿತೀಶ್ ಕೆ. ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಯಲ್ಲಿ ತಾಪಮಾನವು ಸಾಮಾನ್ಯವಾಗಿ 47 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಪ್ರತಿ ವರ್ಷದ ವಾಡಿಕೆಯಿಗಿಂತ ಸುಮಾರು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚುವರಿ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿರುವುದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಹೆಚ್ಚುತ್ತಿರುವ ಬಿಸಿಲಿನ ಜಳದಿಂದ ಸರ್ಕಾರಿ ನೌಕರರು ಕಚೇರಿಗೆ ತೆರಳಿ ಕಾರ್ಯನಿರ್ವಹಿ ಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೆ ಹಲವು ನೌಕರರು ವಿವಿಧ ಆರೋಗ್ಯ ಸಮಸ್ಯೆ ಗಳಿಂದ ಬಳಲುತ್ತಿದ್ದು, ತೀವ್ರ ಬಿಸಿಲು ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಹಾಗೂ ಶಾಖದ ಆಘಾತದಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ ಆದರಿಂದ ಏಪ್ರಿಲ್ ಹಾಗೂ ಮೇ ತಿಂಗಳ ಲ್ಲಿ ಕಚೇರಿ ಕಾರ್ಯಾವಧಿಯನ್ನು ಬೆಳಿಗ್ಗೆ 8 ಗಂಟೆ ಯಿಂದ ಮಧ್ಯಾಹ್ನ 1.30ರವರೆಗೆ ನಿಗದಿಪಡಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.