ಬಾಗಲಕೋಟೆ: ಉಪಚುನಾವಣೆಯ(Bagalkot By-Election) ಕಾವು ಏರುತ್ತಿರುವ ಬೆನ್ನಲ್ಲೇ ಬಾಗಲಕೋಟೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿದ್ದ ಪ್ರಚಾರ ಸಭೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಭಾಗವಹಿಸಿ ನಿಯಮ ಉಲ್ಲಂಘಿಸಿದ್ದಾರೆ.
ಯಾರು ಈ ಶಿಕ್ಷಕ?
ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ, ವಿಜಯಪುರ ಜಿಲ್ಲೆಯ ಆಲಮಟ್ಟಿ ಎಂ.ಪಿ.ಎಸ್ ಶಾಲೆಯ ಸಹಶಿಕ್ಷಕ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿರುವ ಚಂದ್ರು ನುಗ್ಲಿ ಭಾಗವಹಿಸಿದ್ದರು. ಸರ್ಕಾರಿ ನೌಕರರಾಗಿದ್ದುಕೊಂಡು ರಾಜಕೀಯ ಪಕ್ಷದ ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಾಸ್ಕ್ ಹಾಕಿ ಎಸ್ಕೇಪ್!
ಸಭೆಯಲ್ಲಿ ಮುಖಕ್ಕೆ ಮಾಸ್ಕ್ ಧರಿಸಿ, ಗುಪ್ತವಾಗಿ ಓಡಾಡುತ್ತಿದ್ದ ಚಂದ್ರು ನುಗ್ಲಿ ಅವರು ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದರು. ಇದನ್ನು ಗಮನಿಸಿದ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಮಾಡಲು ಮುಂದಾದಾಗ, ಶಿಕ್ಷಕ ಚಂದ್ರು ನುಗ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳಲು ಸಮೀಪದ ಕಬ್ಬಿನ ಹೊಲದ ಕಡೆಗೆ ಓಡಿ ಹೋಗಿ ಎಸ್ಕೇಪ್ ಆಗಿದ್ದಾರೆ. ಈ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಶಿಸ್ತು ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ,(ಏಜೆನ್ಸೀಸ್).