ಶ್ರವಣಬೆಳಗೊಳ ಜೈನ ಮಠದಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಸಿ.ಎನ್.ಬಾಲಕೃಷ್ಣ, ಮಠದ ಪ್ರತಿನಿಧಿ ರಾಜೇಶ್ ಖನ್ನಾ ಇದ್ದರು.
ಶ್ರವಣಬೆಳಗೊಳ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಸಾದ್’ (ಪಿಆರ್‌ಎಸ್‌ಎಡಿ) ಯೋಜನೆಯಡಿ ವಿಶ್ವವಿಖ್ಯಾತ ಶ್ರವಣಬೆಳಗೊಳ ಕ್ಷೇತ್ರಕ್ಕೆ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಲ್ಪಿಸುವಂತೆ ಸೋಮವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಭೇಟಿ ಮಾಡಿ ಶ್ರವಣಬೆಳಗೊಳ ಜೈನ ಮಠದಿಂದ ಮನವಿ ಸಲ್ಲಿಸಲಾಯಿತು.
ಹಿರಿಸಾವೆ, ಶ್ರವಣಬೆಳಗೊಳ ಹಾಗೂ ಚನ್ನರಾಯಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸುವುದು, ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಸಾದ್ ಯೋಜನೆಯಿಂದ ಅಗತ್ಯ ಸೌಕರ್ಯ ಕಲ್ಪಿಸುವುದು, ಶ್ರವಣಬೆಳಗೊಳದಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ರಾಕೃತ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಯಿತು.
ಈ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಅವರ ಮೂಲಕ ಮನವಿ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರವಣಬೆಳಗೊಳ ಜೈನ ಮಠದ ಪ್ರತಿನಿಧಿ ರಾಜೇಶ್ ಖನ್ನಾ ಇದ್ದರು.