ರಾಜ್ಯ

ಬೈಕ್​ ಟ್ಯಾಕ್ಸಿ ಅನುಮತಿ ವಿಚಾರ: ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಬೇಕಾಗುತ್ತದೆ: ಸಚಿವ ಬೈರತಿ ಸುರೇಶ್ | Bike taxi

ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಆದಾಗ್ಯೂ ಈ ಕುರಿತು ಅಡ್ವೋಕೇಟ್ ಜನರಲ್ ಅವರೊಂದಿಗೆ ಇನ್ನೊಮ್ಮೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದ್ದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ(ನ. 18) ತಿರಸ್ಕರಿಸಿದೆ. ಮತ್ತು ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವ ಬದಲು ಅವುಗಳಿಗೆ ಸೂಕ್ತ ನಿಯಮಾವಳಿಗಳನ್ನು ರೂಪಿಸಿ ನಿಯಂತ್ರಿಸುವುದೇ ಉತ್ತಮ ಮಾರ್ಗ ಹೇಳಿದೆ.

ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ಬೈರತಿ ಸುರೇಶ್, ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಆದಾಗ್ಯೂ ಈ ಕುರಿತು ಅಡ್ವೋಕೇಟ್ ಜನರಲ್ ಅವರೊಂದಿಗೆ ಇನ್ನೊಮ್ಮೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ನಿರ್ದೇಶನದಂತೆ ಬೈಕ್ ಟ್ಯಾಕ್ಸಿ ನಿಷೇಧ ಮಾಡುವ ಬದಲು ಅನೇಕ ನಿಯಮಗಳನ್ನು ರೂಪಿಸಿ ನಿರ್ಬಂಧ ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ. ಈ ಸಂಬಂಧ ನಿಯಮಗಳನ್ನು ರೂಪಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡುವ ಸಹಪ್ರಯಾಣಿಕರ ಅದರಲ್ಲೂ ಪ್ರಮುಖವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆ ನಮ್ಮ ಆದ್ಯತೆ. ಈ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿ ಚಲಾಯಿಸುವವರ ದಾಖಲೆಗಳು, ಜಿಪಿಎಸ್ ಅಳವಡಿಕೆ, ವಾಹನಕ್ಕೆ ವಿಮೆ ಮತ್ತು ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಇಂತಹ ಹಲವು ನಿಯಮಗಳನ್ನು ರೂಪಿಸಿ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.