ಸಚಿವ ಮಧು ಬಂಗಾರಪ್ಪ  
ರಾಜ್ಯ

ಖಾಸಗಿ ಶಾಲೆಗಳಿಗೆ ಸೆಡ್ಡು: ಮುಂದಿನ ವರ್ಷದಿಂದ ದ್ವಿಭಾಷಾ ಮಾಧ್ಯಮ ಜಾರಿ, ಕೆಪಿಎಸ್ ಸ್ಕೂಲ್​ಗಳಿಗೆ ಉಚಿತ ಬಸ್ ಸೌಲಭ್ಯ!: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮವನ್ನು ಒಳಗೊಂಡ ದ್ವಿಭಾಷಾ ಮಾಧ್ಯಮ (ಬೈಲಿಂಗ್ವಲ್ ಮೀಡಿಯಂ) ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಶಿಕ್ಷಣ ಇಲಾಖೆಯ ಸುಧಾರಣೆಗಳು ಹಾಗೂ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಮತ್ತು ಭೂಹಕ್ಕು ಸಮಸ್ಯೆಗಳ ಕುರಿತು ವಿವರಣೆ ನೀಡಿದರು.

ಕೆಪಿಎಸ್ ಶಾಲೆಗಳ ಉನ್ನತೀಕರಣ ಮತ್ತು ಉಚಿತ ಬಸ್ ವ್ಯವಸ್ಥೆ

ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಅಭಿವೃದ್ಧಿ ಮತ್ತು ಉನ್ನತೀಕರಣಕ್ಕಾಗಿ ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳು, ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳು, ಕಾರ್ಪೊರೇಟ್ ಸಂಸ್ಥೆಗಳು ಹಾಗೂ ತನ್ನದೇ ಬಜೆಟ್ ಮೂಲಕ ಬೃಹತ್ ಅನುದಾನವನ್ನು ಕ್ರೋಢೀಕರಿಸುತ್ತಿದೆ. ಈ ಯೋಜನೆಗೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) 2,500 ಕೋಟಿ ರೂ ನೀಡಲಿದ್ದು, ಸರ್ಕಾರ ಪ್ರತಿ ಶಾಲೆಗೆ ಸರಾಸರಿ 2 ರಿಂದ 4 ಕೋಟಿ ರೂ ವೆಚ್ಚ ಮಾಡಲಿದೆ ಎಂದರು.

ಕೆಪಿಎಸ್ ಶಾಲೆಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದ್ದು, ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿಗಳು ಆಗಮಿಸಬೇಕೆಂಬ ಆಸೆ ಮತ್ತು ವಿಶ್ವಾಸವಿದೆ. ಈ ಶಾಲೆಗಳಲ್ಲಿ ಸುಸಜ್ಜಿತ ಕಟ್ಟಡಗಳು, ಸ್ಮಾರ್ಟ್ ಕ್ಲಾಸ್‌ಗಳು, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯಗಳು, ಗ್ರಂಥಾಲಯ, ಶುದ್ಧ ಕುಡಿಯುವ ನೀರು ಹಾಗೂ ಉತ್ತಮ ಶೌಚಾಲಯದ ವ್ಯವಸ್ಥೆ ಇರಲಿದೆ. ಅಲ್ಲದೆ, ಮುಂಬರುವ ಜೂನ್ ತಿಂಗಳಿನಿಂದ ರಾಜ್ಯದ ಎಲ್ಲಾ 1,600 ಕೆಪಿಎಸ್ ಶಾಲೆಗಳ ಮಕ್ಕಳ ಸಾರಿಗೆ ವ್ಯವಸ್ಥೆಗಾಗಿ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದರು. ಇದೇ ವೇಳೆ, ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಸಿಇಟಿ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಬಗರ್‌ಹುಕುಂ ಸಾಗುವಳಿದಾರರ ಪರ ಹೋರಾಟ!

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದ್ದು, ಇನ್ನು 10 ದಿನಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಅಧಿಕೃತ ವರದಿ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು. ಅರಣ್ಯ ಹಕ್ಕು ಕಾಯ್ದೆಯಡಿ, ಅರಣ್ಯ ಜಮೀನನ್ನು ಸಾಮಾನ್ಯ ವರ್ಗದವರು 75 ವರ್ಷ ಹಾಗೂ ಪರಿಶಿಷ್ಟ ಪಂಗಡದವರು 5 ವರ್ಷ ಉಳುಮೆ ಮಾಡಿರಬೇಕು ಎಂಬ ನಿಯಮವಿದೆ, ಆದರೆ, ಇಡೀ ರಾಜ್ಯದಲ್ಲಿ ಇದುವರೆಗೆ ಯಾರಿಗೂ ಹಕ್ಕುಪತ್ರ ನೀಡಿಲ್ಲ. ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಜಂಟಿಯಾಗಿ ಸರ್ವೆ ನಡೆಸಿ, ಗ್ರಾಮ ಸಭೆಗಳನ್ನು ಮಾಡಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಶಿವಮೊಗ್ಗ, ಕಾರವಾರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಈ ಸಮಸ್ಯೆಯಿದೆ. ಹಿಂದಿನ ಸರ್ಕಾರ ಬಗರ್‌ಹುಕುಂ ಸಾಗುವಳಿದಾರರ ಅರ್ಜಿಗಳನ್ನು ತಿರಸ್ಕರಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮರುಸರ್ವೆ ನಡೆಸಿ ಅರ್ಹ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ನಮ್ಮ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಭರವಸೆ ನೀಡಿದರು.

ವಿಮಾನ ನಿಲ್ದಾಣ ಕಾಮಗಾರಿ ಶೇ. 90ರಷ್ಟು ಪೂರ್ಣ!

ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್ ಲ್ಯಾಂಡಿಂಗ್ ಕಾಮಗಾರಿಗೆ ರಾಜ್ಯ ಸರ್ಕಾರ 23 ಕೋಟಿ ರೂ ವೆಚ್ಚ ಮಾಡುತ್ತಿದ್ದು, ಈಗಾಗಲೇ ಶೇ. 90ರಷ್ಟು ಕೆಲಸ ಪೂರ್ಣಗೊಂಡಿದೆ. ಉಡಾನ್ ಯೋಜನೆಯಡಿ ಹೆಚ್ಚಿನ ವಿಮಾನಗಳ ಹಾರಾಟಕ್ಕೆ ಹಾಗೂ ಏವಿಯೇಷನ್ ತರಬೇತಿ ಕೇಂದ್ರವನ್ನು ಆರಂಭಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.