Bowring Hospital Tragedy 
ರಾಜ್ಯ

Bowring Hospital Tragedy: ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ

ಬೆಂಗಳೂರು: ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ(Bowring Hospital Tragedy) ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಲ್ಲಿ ಮೃತಪಟ್ಟ 7 ಮಂದಿಯ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಅವರು, ಗಾಯಾಳುಗಳಿಗೆ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸ್ಥಳದಲ್ಲೇ ತನಿಖೆಗೆ ಆದೇಶ

ಘಟನಾ ಸ್ಥಳದಲ್ಲಿ ಅವಶೇಷಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಯವರು, ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಉನ್ನತ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡರು. ವ್ಯಾಪಾರ ಮಾಡುತ್ತಿದ್ದವರ ಮೇಲೆ ಗೋಡೆ ಕುಸಿದು ಅಮಾಯಕರು ಬಲಿಯಾದ ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ದುರಂತಕ್ಕೆ ಕಾರಣವೇನು ಎಂಬುದರ ಕುರಿತು ತಕ್ಷಣವೇ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದರು.

ಅಧಿಕಾರಿಗಳಿಗೆ ಸಿಎಂ ತರಾಟೆ

"ಏನು ಕ್ರಮಕೈಗೊಂಡಿದ್ದೀರಿ? ಹಳೆಯ ಗೋಡೆ ಎಂದು ನೋಡಲು ಆಗುವುದಿಲ್ಲವೇ? ನಿಮ್ಮ ಮಧ್ಯೆ ಸಮನ್ವಯತೆ (Co-ordination) ಇರುವುದಿಲ್ಲವೇ?" ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಮತ್ತು ಆಸ್ಪತ್ರೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. "ನೀವು ಮೊದಲೇ ಎಚ್ಚರವಹಿಸಿದ್ದರೆ ಈ ಅನಾಹುತವನ್ನು ತಪ್ಪಿಸಬಹುದಿತ್ತು. ನಿಮ್ಮ ನಿರ್ಲಕ್ಷ್ಯದಿಂದಾಗಿ ಇಂದು ಕುಟುಂಬಗಳು ಬೀದಿಗೆ ಬಂದಿವೆ" ಎಂದು ಅಧಿಕಾರಿಗಳ ವಿರುದ್ಧ ಗುಡುಗಿದರು.

ಆಸ್ಪತ್ರೆಗೆ ಭೇಟಿ, ಗಾಯಾಳುಗಳ ವಿಚಾರಣೆ

ಘಟನಾ ಸ್ಥಳದಿಂದ ನೇರವಾಗಿ ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿದ ಸಿಎಂ, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಯಾವುದೇ ರೀತಿಯ ಹಣಕಾಸಿನ ಹೊರೆಯಾಗದಂತೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಮತ್ತು ಚಿಕಿತ್ಸೆಯಲ್ಲಿ ಯಾವುದೇ ಲೋಪವಾಗಬಾರದು ಎಂದು ವೈದ್ಯಕೀಯ ಸಿಬ್ಬಂದಿಗೆ ತಾಕೀತು ಮಾಡಿದರು.

ಪರಿಹಾರ ಘೋಷಣೆ

ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ಧನವನ್ನು ಘೋಷಿಸಲಾಗಿದ್ದು, ಗಾಯಾಳುಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಭರವಸೆ ನೀಡಿದರು. ಮಳೆಯಿಂದಾಗಿ ನಗರದಲ್ಲಿ ಇಂತಹ ಹಳೆಯ ಗೋಡೆ ಅಥವಾ ಕಟ್ಟಡಗಳಿದ್ದರೆ ತಕ್ಷಣವೇ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಅಧಿಕಾರಿಗಳಿಗೆ ಸೂಚಿಸಿದರು.