ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  
ರಾಜ್ಯ

ಪೇಮೆಂಟ್, ಮ್ಯಾನೇಜ್ಮೆಂಟ್ ಕೋಟಾದಡಿ ಸಂಪುಟ ರಚನೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ರಾಜ್ಯದ ಹಿತದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಆಗಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಪೈಪೋಟಿಗಾಗಿ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಸಂಪುಟ ವಿಸ್ತರಣೆ ಮಾಡಿದೆ. ರೇಟ್ ಫಿಕ್ಸೃ್ ಆಗದೆ ಡೇಟ್ ಫಿಕ್ಸ್ ಆಗುತ್ತಿಲ್ಲ ಎಂದು ಈ ಹಿಂದೆ ಹೇಳಿದ್ದೆ. ಪೇಮೆಂಟ್ ಕೋಟಾದಲ್ಲಿ ಅಥವಾ ಮ್ಯಾನೇಜ್ಮೆಂಟ್ ಕೋಟಾದಡಿ ಸಂಪುಟಕ್ಕೆ ಸೇರಬೇಕಿತ್ತು. ಎರಡೂ ಬಿಟ್ಟರೆ 3ನೇ ಕೋಟಾ ಇರಲಿಲ್ಲ. ಕೆಲವರು ಪೇಮೆಂಟ್ ಕೋಟಾದಲ್ಲಿ, ಇನ್ನೂ ಕೆಲವರು ಮ್ಯಾನೇಜ್ಮೆಂಟ್ ಕೋಟಾದಡಿ ಸಂಪುಟ ಸೇರಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ವಾಲ್ಮೀಕಿ ನಿಗಮ ಹಗರಣದಲ್ಲಿ ನ್ಯಾಯಾಂಗ ವಿಚಾರಣೆ ಎದುರಿಸುತ್ತಿರುವ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ಕೊಟ್ಟಿರುವುದು ಎಷ್ಟು ಸರಿ. ಭ್ರಷ್ಟಾಚಾರರಹಿತ ಆಡಳಿತದ ಬಗ್ಗೆ ಮಾತನಾಡುವ ಕಾಂಗ್ರೆಸ್ ನೈತಿಕತೆಯನ್ನು ಉಲ್ಲಂಘಿಸಿದೆ. ಸಚಿವ ಸ್ಥಾನ ನೀಡದಿದ್ದರೆ ಹೈಕಮಾಂಡ್‌ಗೆ ಸಂಬಂಧಿತ ಮಾಹಿತಿ ಬಹಿರಂಗ ಮಾಡುವುದಾಗಿ ನಾಗೇಂದ್ರ ಬೆದರಿಕೆವೊಡ್ಡಿದ್ದಾರೆ. ಆದ್ದರಿಂದ ಅವರನ್ನು ಸೇರಿಸಿಕೊಳ್ಳಲಾಗಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.