ರಾಜ್ಯ

'ಬಸವ ಮಂಟಪ' ಕೃತಿ ಮುಟ್ಟುಗೋಲು, ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಸಂಪುಟ ಅಸ್ತು!

ಬೆಂಗಳೂರು: ರಾಜ್ಯದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಘನತೆಗೆ ಚ್ಯುತಿ ತಂದ ಆರೋಪದ ಮೇಲೆ, ಲೇಖಕ ರವಿ ಹಂಜ್ ಅವರ ಬಸವ ಮಂಟಪ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರು ತಿಳಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು, ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳು ಸದರಿ ಕೃತಿಯಲ್ಲಿವೆ ಎಂಬ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಈ ಕೃತಿ ಹಾಗೂ ಲೇಖಕರ ಹೇಳಿಕೆಗಳ ಕುರಿತು ರಾಜ್ಯಾದ್ಯಂತ ವ್ಯಕ್ತವಾದ ಆಕ್ರೋಶ ಮತ್ತು ದಾಖಲಾದ ಪ್ರಕರಣಗಳ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಪತ್ರ!

ಇನ್ನು ಈ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ, ಸದರಿ ಪುಸ್ತಕದಲ್ಲಿ ವಿಶ್ವಗುರು ಬಸವಣ್ಣನವರನ್ನು ಹಾಗೂ ಲಿಂಗಾಯತ ಸಮುದಾಯವನ್ನು ಅವಹೇಳನ ಮಾಡಲಾಗಿದೆ. ಬಸವಣ್ಣನವರಿಗೆ ಆಗುವ ಅವಮಾನವನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ಕೃತಿಯ ಲೇಖಕ ಹಾಗೂ ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ, ಲೇಖಕ ರವಿ ಹಂಜ್ ಅವರು ಬಸವಣ್ಣನವರ ಬಗ್ಗೆ ಆಡಿರುವ ಅವಹೇಳನಕಾರಿ ಮಾತುಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವ ಕುರಿತಂತೆಯೂ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಈ ವಿಡಿಯೋಗಳನ್ನು ತೆರವುಗೊಳಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.