ರಾಜ್ಯ

ಕಲಬುರಗಿಯ ಪ್ರವಾಸಿ ತಾಣಗಳ ಮಾಹಿತಿ ಪುಸ್ತಕ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳು

ಕಲಬುರಗಿ: :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ಪ್ರವಾಸೋದ್ಯಮ ಇಲಾಖೆಯು ಹೊರತಂದಿರುವ ಕಲಬುರಗಿ ಜಿಲ್ಲೆಯ ಪ್ರವಾಸಿ ತಾಣಗಳ ಸಂಕ್ಷಿಪ್ತ ಮಾಹಿತಿ ನೀಡುವ ಪುಸ್ತಕ ಮತ್ತು ಪ್ರವಾಸಿ ಮಡಿಕೆ ಪತ್ರಗಳನ್ನು (ಬ್ರೋಚರ್) ಬಿಡುಗಡೆ ಮಾಡಿದರು.
ಜಿಲ್ಲೆಯ ಪ್ರವಾಸಿ ತಾಣಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ವಿಶೇಷ ಆಸಕ್ತಿ ವಹಿಸಿ ಇದೇ ಮೊದಲ ಬಾರಿಗೆ ಜಿಲ್ಲೆಯ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಬಿಂಬಿಸುವ ಮತ್ತು ಜಿಲ್ಲೆಯ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಇತರೆ ಪ್ರವಾಸಿ ತಾಣಗಳ ಕುರಿತ ಮಾಹಿತಿ ನೀಡುವ ಕಾಫಿ ಟೇಬಲ್ ಪುಸ್ತಕ ಹೊರತಂದಿದೆ. ಪುಸ್ತಕ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿದ್ದು, ಸುಮಾರು 11.05 ಲಕ್ಷ ರೂ.ಗಳ ಖರ್ಚು ಮಾಡಿ ಆಕರ್ಷಕವಾಗಿ ಪುಸ್ತಕ ಹೊರತರಲಾಗಿದೆ.
ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಜರಗುವ ಪ್ರವಾಸೋದ್ಯಮ ಮೇಳಗಳು, ಟ್ರಾವೆಲ್ ಎಕ್ಸಪೋಗಳು ಮತ್ತು ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿವಿಧ ರಾಜ್ಯ ಮತ್ತು ದೇಶಗಳ ಪ್ರವಾಸೋದ್ಯಮ ಕ್ಷೇತ್ರದ ಪಾಲುದಾರರು, ಹೂಡಿಕೆದಾರರು ಮತ್ತು ಪ್ರವಾಸೋದ್ಯಮ ಉತ್ಸಾಹಿಗಳ ಮೂಲಕ ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮದ ಕುರಿತು ಹೆಚ್ಚಿನ ಪ್ರಚಾರ ನೀಡುವಲ್ಲಿ ಕಾಫಿಟೇಬಲ್ ಪುಸ್ತಕ ಸಹಕಾರಿಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.
ಇದಲ್ಲದೆ ಜಿಲ್ಲೆಗೆ ಭೇಟಿ ನೀಡುವ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಸಂಕ್ಷಿಪ್ತ ಮಾಹಿತಿ ಒದಗಿಸುವ ಪ್ರವಾಸಿ ಮಡಿಕೆ ಪತ್ರಗಳನ್ನು (ಬ್ರೋಚರ್) ಸಹ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ & ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ್, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕ ಡಾ. ಅಜಯ ಸಿಂಗ್, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಅಫಜಲಪೂರ ಶಾಸಕ ಎಂ.ವೈ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಕೆ.ವಿ.ತ್ರಿಲೋಕಚಂದ್ರ, ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಪ್ರವಾಸೋದ್ಯಮ ಇಲಾಖೆಯ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ಡಾ. ಎಸ್. ತಿಪ್ಪೇಸ್ವಾಮಿ, ಉಪನಿರ್ದೇಶಕಿ ಬೇಬಿ ಮೋಗೇರ ಹಾಗೂ ಇಲಾಖೆಯ ಇತರೆ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.