ಕಲಬುರಗಿ: ಚಿತ್ತಾಪುರದಲ್ಲಿ ಇದೇ ಮಾರ್ಚ್ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1,069 ಕೋಟಿ ರೂ. ಗಳಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಸಣ್ಣ ನೀರಾವರಿ ಇಲಾಖೆ, ಕೆ.ಎನ್.ಎನ್.ಎಲ್, ಕರ್ನಾಟಕ ಗೃಹ ಮಂಡಳಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಕೆ.ಆರ್.ಐ.ಡಿ.ಎಲ್, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಶನ್, ಚಿತ್ತಾಪುರ ಪುರಸಭೆ, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂಜಿನೀಯರಿಂಗ್ ಇಲಾಖೆ, ಕೃಷಿ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕಾಡಾ, ರೈಟ್ಸ್ ಲಿ. ಹಾಗೂ ರೈಲ್ವೆ ಇಲಾಖೆ ಹೀಗೆ ಸುಮಾರು 20 ಇಲಾಖೆಯ 979.83 ಕೋಟಿ ರೂ. ಮೊತ್ತದ 777 ಹೊಸ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗುತ್ತದೆ.
ಇದಲ್ಲದೆ ಕಾರ್ಯಕ್ರಮದಲ್ಲಿ ವಿವಿಧ 8 ಇಲಾಖೆಗಳ ಮೂಲಕ ಪೂರ್ಣಗೊಂಡ 23 ಕಾಮಗಾರಿಗಳಿಗೆ ಉದ್ಘಾಟನೆ ನಡೆಯಲಿದ್ದು, ಇವುಗಳ ಒಟ್ಟು ಅಂದಾಜು ವೆಚ್ಚ ಸುಮಾರು 89.57 ಕೋಟಿ ರೂ. ಆಗಿದೆ. ಇದರಲ್ಲಿ ಮುಖ್ಯವಾಗಿ ಕರ್ನಾಟಕ ಗೃಹ ಮಂಡಳಿ, ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ, ಕೃಷಿ ಇಲಾಖೆ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ, ಅರಣ್ಯ ಇಲಾಖೆ ಹಾಗೂ ಚಿತ್ತಾಪುರ ಮತ್ತು ವಾಡಿ ಪುರಸಭೆಯ ಕಾಮಗಾರಿಗಳು ಲೋಕಾರ್ಪಣೆಯಾಗಲಿವೆ.
ಇದರಿಂದ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,069 ಕೋಟಿ ಕ್ಕೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದ್ದರಿಂದ ಚಿತ್ತಾಪುರ ಕ್ಷೇತ್ರದಲ್ಲಿ ರಸ್ತೆ, ನೀರಾವರಿ, ಆರೋಗ್ಯ, ಗೃಹ ನಿರ್ಮಾಣ, ಕುಡಿಯುವ ನೀರು, ಗ್ರಾಮೀಣ ಮೂಲಸೌಕರ್ಯ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಮಹತ್ವದ ಅಭಿವೃದ್ಧಿಗೆ ದಾರಿ ಮಾಡಿಕೊಡಲಿದೆ.
ಕಾರ್ಯಕ್ರಮದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರಣ ರಾಜ್ಯದ ಗ್ರಾಮೀಣಾಬಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ ಪ್ರದೇಶದ ಸಚಿವರುಗಳು, ಶಾಸಕರು, ಸಂಸದರು ಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಕ್ಷೇತ್ರದ ಸಾವಿರಾರು ಜನಸಂಖ್ಯೆ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ.