ರಾಜ್ಯ

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ವಸತಿ ಶಾಲೆಯಲ್ಲಿ ಮಕ್ಕಳು ಅಸ್ವಸ್ಥ; ಕರಜಗಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ

ಅಫಜಲಪುರ: ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಾಸುವ ಮುನ್ನವೇ, ಇದೀಗ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲೂ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.
ಗುರುವಾರ ಬೆಳಗ್ಗೆ ಶಾಲೆಯಲ್ಲಿ ನೀಡಲಾದ ಉಪಾಹಾರ ಸೇವಿಸಿದ ಕೆಲವೇ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ಅಸ್ವಸ್ಥತೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ. ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣವೇ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ನಂತರ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಅಫಜಲಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಲ್ಲ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪಾಲಕರು ಆಸ್ಪತ್ರೆ ಹಾಗೂ ಶಾಲೆಗೆ ಧಾವಿಸಿ, ಶಾಲೆಯಲ್ಲಿನ ಆಹಾರದ ಗುಣಮಟ್ಟ ಮತ್ತು ನಿರ್ವಹಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಸತಿ ಶಾಲೆಗಳಲ್ಲಿನ ಆಹಾರದ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.