ಮರಗಲ್ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು Maragal village
ಬಂಗಾರಪೇಟೆ: ತಾಲೂಕಿನ ಮರಗಲ್ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ನೀರಿನ ಸರಬರಾಜು ಸ್ಥಗಿತಗೊಂಡಿದ್ದರಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದರು. ಇದೀಗ ಕಾರಹಳ್ಳಿ ಗ್ರಾಪಂ ಅಧಿಕಾರಿಗಳ ತ್ವರಿತ ಕ್ರಮದಿಂದ ಕೊಳವೆಬಾವಿ ದುರಸ್ತಿ ಮಾಡಿ ನೀರು ಸರಬರಾಜು ಪುನರಾರಂಭಗೊಳಿಸಲಾಗಿದ್ದು, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗಿದೆ.Maragal village
ಬರಗಾಲದ ಸಂದರ್ಭ ಯಾವುದೇ ಗ್ರಾಮಕ್ಕೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂಬ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಪಿಡಿಒ ವೇಣು ಮರಗಲ್ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದರು. ಕೊಳವೆಬಾವಿಯಲ್ಲಿ ನೀರಿನ ಮಟ್ಟ ಕುಸಿದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚುವರಿ ಪೈಪ್ಗಳನ್ನು ಅಳವಡಿಸಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಿದರು.
ಗ್ರಾಮದ ಮುಖಂಡ ಶ್ರೀನಿವಾಸ್ ಮಾತನಾಡಿ, ಬೇಸಿಗೆ ತೀವ್ರತೆಯಿಂದ ಅಂತರ್ಜಲ ಮಟ್ಟ ಕುಸಿದ ಕಾರಣ ಕೊಳವೆಬಾವಿಯಲ್ಲಿ ನೀರು ಕಡಿಮೆಯಾಗಿತ್ತು. ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದ ತಕ್ಷಣ ಪಿಡಿಒ ವೇಣು ಗ್ರಾಮಕ್ಕೆ ಆಗಮಿಸಿ ಹೆಚ್ಚುವರಿ ಪೈಪ್ ಅಳವಡಿಸಿ ನೀರಿನ ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಿಳಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕೊಳವೆಬಾವಿ ಕೊರೆಸಿದರೂ ಅದರ ನೀರನ್ನು ಸಮರ್ಪಕವಾಗಿ ಬಳಕೆ ಮಾಡಲಾಗುತ್ತಿಲ್ಲ. "ಮನೆ ಮನೆ ಗಂಗಾ' ಯೋಜನೆ ನಮ್ಮ ಗ್ರಾಮಕ್ಕೆ ಕೇವಲ ಘೋಷಣೆೆಯಾಗಿ ಉಳಿದಿದೆ. ಮುಂದಿನ ದಿನಗಳಲ್ಲಿ ಜಲಜೀವನ್ ಮಿಷನ್ ಯೋಜನೆಯ ನೀರು ಗ್ರಾಮಕ್ಕೆ ಸಮರ್ಪಕವಾಗಿ ಲಭ್ಯವಾಗಬೇಕು ಎಂದು ಒತ್ತಾಯಿಸಿದರು.
ಪಿಡಿಒ ವೇಣು ಮಾತನಾಡಿ, ಗ್ರಾಮಸ್ಥರ ದೂರಿನ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲಾಗಿದೆ ಎಂದು ಹೇಳಿದರು.