ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಹಾಯಕ್ಕೆ ಬರಲು ಸರ್ಕಾರ ಮೋಡ ಬಿತ್ತನೆ ನಿರ್ಧಾರ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಎನ್. ಎಚ್. ಕೋನರಡ್ಡಿ, ರಾಜ್ಯದಲ್ಲಿ ಮಳೆ ಕೊರತೆಯಿಂದ ಜನ ಜಾನುವಾರಗಳಿಗೆ ಕುಡಿಯುವ ನೀರು, ಮೇವಿನ ಸಮಸ್ಯೆ ಉಂಟಾಗಿದೆ. ಬೆಳೆಗಳು ಸಹ ಒಣಗುತ್ತಿರುವುದರಿಂದ ಅಂತಹ ತಾಲೂಕುಗಳಲ್ಲಿ ತುರ್ತಾಗಿ ಮೋಡ ಬಿತ್ತನೆ ಕಾರ್ಯ ಕೈಗೊಳ್ಳುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಚಲುವರಾಯಸ್ವಾಮಿ, ಈಗಾಗಲೇ ಮೋಡ ಬಿತ್ತನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಆದರಿಂದ ಶೀಘ್ರದಲ್ಲಿಯೇ ಮೋಡ ಬಿತ್ತನೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು. ರಾಜ್ಯದ ದಕ್ಷಿಣ ಭಾಗದಲ್ಲಿ ಮೋಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆ ಕೈಗೊಂಡಾಗ ಅನುಕೂಲವಾಗಲಿದೆ.
ಆದರೆ, ಉತ್ತರ ಕರ್ನಾಟಕ ಭಾಗದಲ್ಲಿ ಮೋಡ ಅಷ್ಟಾಗಿ ಇಲ್ಲದ ಕಾರಣ ಮೋಡ ಬಿತ್ತನೆಯಿಂದ ಅನುಕೂಲ ಆಗಲಿದೆಯೇ ಎಂಬುದರ ಬಗ್ಗೆಯೂ ಚರ್ಚೆಗಳು ನಡೆದಿವೆ. ಮೋಡ ಇರುವ ಕಡೆಗಳಲ್ಲಿ ಯೋಜನೆ ಅನುಷ್ಠಾನ ಮಾಡುವುದರ ಬಗ್ಗೆ ಕ್ಯಾಬಿನೆಟ್‌ನಲ್ಲಿ ನಿರ್ಧಾರ ಮಾಡಿದ್ದು, ಶೀಘ್ರದಲ್ಲಿಯೇ ಮೋಡ ಬಿತ್ತನೆ ಮಾಡಲಾಗುತ್ತದೆ. ಇದರಿಂದ ರಾಜ್ಯದಲ್ಲಿ ಎದುರಾಗಿರುವ ಬರದ ಸಮಸ್ಯೆಯಿಂದ ಒಂದಿಷ್ಟು ಹೊರಬರಲು ಮತ್ತು ರೈತರ ಬೆಳೆಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ ಎಂದು ಚಲುವರಾಯಸ್ವಾಮಿ ಮಾಹಿತಿ ನೀಡಿದರು.