ಮೈಸೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮೈಸೂರಿನ ಕುವೆಂಪುನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಶುಕ್ರವಾರ ತಡರಾತ್ರಿ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಶ್ರೀರಂಗಪಟ್ಟಣದಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮ ಮುಗಿಸಿಕೊಂಡು ನೇರವಾಗಿ ಮೈಸೂರಿನ ಕುವೆಂಪುನಗರದಲ್ಲಿರುವ ಸಿದ್ದರಾಮಯ್ಯ ಅವರ ಹೊಸ ನಿವಾಸಕ್ಕೆ ತೆರಳಿದ ಸಿಎಂ ಡಿ ಕೆ ಶಿವಕುಮಾರ್, ಅವರೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾತ್ರಿ ಊಟಕ್ಕೆ ಆಗಮಿಸಿದ್ದರು ಎಂದು ಕೆಲವರು ಹೇಳುತ್ತಿದ್ದರೆ, ರಾಜ್ಯದ ಪ್ರಚಲಿತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಭೇಟಿಗೆ ವಿಶೇಷ ಮಹತ್ವ ನೀಡಲಾಗುತ್ತಿದೆ. ಇತ್ತೀಚೆಗೆ ಚರ್ಚೆಯಲ್ಲಿರುವ ಸ್ಟಿಂಗ್ ಆಪರೇಷನ್ ವಿಚಾರವೂ ಉಭಯ ನಾಯಕರ ಮಾತುಕತೆಯಲ್ಲಿ ಪ್ರಸ್ತಾಪವಾಗಿದೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.
ಈ ವಿಚಾರವಾಗಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿ, ಧೈರ್ಯ ತುಂಬಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಕುರಿತು ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಭೇಟಿಯ ಉದ್ದೇಶ ಹಾಗೂ ಮಾತುಕತೆಯ ನಿಖರ ವಿವರಗಳೂ ಬಹಿರಂಗವಾಗಿಲ್ಲ.
ರಾಜ್ಯ ರಾಜಕೀಯದಲ್ಲಿ ವಿವಿಧ ಬೆಳವಣಿಗೆಗಳು ಚರ್ಚೆಯಲ್ಲಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಅವರು ಮಾಜಿ ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿರುವುದು ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಇದು ಸೌಜನ್ಯದ ಭೇಟಿಯೇ ಅಥವಾ ಪ್ರಚಲಿತ ರಾಜಕೀಯ ವಿದ್ಯಮಾನಗಳ ಕುರಿತು ನಡೆದ ಸಮಾಲೋಚನೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.