ಬೆಂಗಳೂರು: ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ಶಿಕ್ಷಕರ, ಪದವೀಧರರ ಚುನಾವಣೆಗಳನ್ನು ಜಂಟಿಯಾಗಿ ನಡೆಸುವ ಕುರಿತು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಉಭಯ ಸದನಗಳ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಪಕ್ಷದ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಸಿ.ಟಿ.ರವಿ, ಸಂಸದ ಗೋವಿಂದ ಕಾರಜೋಳ, ಡಿ.ವಿ. ಸದಾನಂದಗೌಡ ಸಮಿತಿ ಸದಸ್ಯರು ಭಾಗವಹಿಸಿದ್ದರು.
ಸಭೆಯ ಬಳಿಕ ವಿಜಯೇಂದ್ರ ಮಾತನಾಡಿ, ಸಚಿವ ಕೆ.ಸುಧಾಕರ್ ನಿಧನದಿಂದ ಖಾಲಿ ಆಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ನಿಲ್ಲಿಸಿ ಜೆಡಿಎಸ್‌ನೊಂದಿಗೆ ಜಂಟಿಯಾಗಿ ಹೋರಾಟ ನಡೆಸಲು ತೀರ್ಮಾನ ಮಾಡಲಾಗಿದೆ. ಹಿರಿಯೂರು ಕ್ಷೇತ್ರದಿಂದ ಜೆಡಿಎಸ್ ಅಥವಾ ಬಿಜೆಪಿಯಲ್ಲಿ ಯಾರು ಅಭ್ಯರ್ಥಿ ಆಗಬೇಕೆಂಬ ಬಗ್ಗೆ ಅಂತಿಮ ನಿರ್ಧಾರ ಮಾಡಲು ಗೋವಿಂದ ಕಾರಜೋಳ, ಅಶೋಕ್ ಮತ್ತು ಸಿ.ಟಿ.ರವಿ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಲಾಗಿದೆ. ಈ ಕಮಿಟಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜತೆ ಚರ್ಚಿಸಿ ಅಭ್ಯರ್ಥಿಯನ್ನು ಅಂತಿಮ ಮಾಡಲಿದೆ ಎಂದು ಮಾಹಿತಿ ನೀಡಿದರು.
ಅಕ್ಟೋಬರ್‌ನಲ್ಲಿ ಬರುವ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಗಳನ್ನು ೋಷಿಸಲಾಗಿದೆ. ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಕಮಿಟಿ ರಚಿಸಲಾಗಿದೆ. ಈ ಎರಡೂ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಹೋರಾಟ ನಡೆಸಿ ಗೆಲ್ಲಲ್ಲೇಬೇಕೆಂದು ನಿರ್ಧಾರ ಮಾಡಿದ್ದು, ಕಾರ್ಯತಂತ್ರ ರೂಪಿಸಲಾಗಿದೆ. ಚುನಾವಣೆ ದೃಷ್ಟಿಯಿಂದ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಲು ಕಮಿಟಿಗಳಿಗೆ ಸೂಚಿಸಲಾಗುತ್ತದೆ ಎಂದು ವಿಜಯೇಂದ್ರ ತಿಳಿಸಿದರು.