ವಿಜಯಪುರ ನಗರದಲ್ಲಿ ಎಐಡಿಎಸ್‌ಒ, ಎಐಡಿವೈಒ, ಎಐಎಂಎಸ್‌ಎಸ್ ಸಂಘಟನೆಯಿಂದ ಪ್ರತಿಭಟನೆ ನಡೆಯಿತು. ಎಐಎಂಎಸ್‌ಎಸ್ ಜಿಲ್ಲಾಧ್ಯಕ್ಷೆ ಗೀತಾ ಎಚ್, ಸಿದ್ದರಾಮ ಹಿರೇಮಠ, ಸಿದ್ಧಲಿಂಗ ಬಾಗೇವಾಡಿ ಇತರರಿದ್ದಾರೆ. 
ರಾಜ್ಯ

ಪ್ರಜಾಪ್ರಭುತ್ವ ವಿರೋಧಿ ಕ್ರಮಕ್ಕೆ ಖಂಡನೆ

ಪ್ರಮುಖ ಮುಖ್ಯಾಂಶಗಳು

  • ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
  • ಪ್ರತಿಭಟನಾ ಮೆರವಣಿಗೆ
ವಿಜಯಪುರ : ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಎಐಡಿಎಸ್‌ಒ, ಎಐಡಿವೈಒ, ಎಐಎಂಎಸ್‌ಎಸ್ ಸಂಘಟನೆಗಳ ಪದಾಧಿಕಾರಿಗಳು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಡಳಿತ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು.
ಎಐಎಂಎಸ್‌ಎಸ್ ಜಿಲ್ಲಾಧ್ಯಕ್ಷೆ ಗೀತಾ ಎಚ್. ಮಾತನಾಡಿ, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಭಾರತದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ,ಯುವ ಜನ, ಮಹಿಳೆಯರ ಮೇಲೆ ನಡೆಸಿರುವ ಪೊಲೀಸರ ದಾಳಿಯನ್ನು ನಾವು ಖಂಡಿಸುತ್ತೇವೆ. ನೀಟ್ ಹಗರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ನ್ಯಾಷನಲ್ ಟೆಸ್ಟ್ ಏಜನ್ಸಿಯನ್ನು ರದ್ದುಗೊಳಿಸಬೇಕು ಎಂದರು.
ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಸಿದ್ದರಾಮ ಹಿರೇಮಠ ಮಾತನಾಡಿ, ದೇಶದ ಯುವ ಜನತೆಗೆ ಪಾರದರ್ಶಕ, ನ್ಯಾಯ ಸಮ್ಮತ ಹಾಗೂ ಭ್ರಷ್ಟಾಚಾರ ಮುಕ್ತ ಪರೀಕ್ಷಾ ವ್ಯವಸ್ಥೆಯನ್ನು ಒದಗಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದೇ ರೀತಿ, ದೇಶದ ಲಕ್ಷಾಂತರ ವಿದ್ಯಾವಂತ ಯುವ ಜನತೆಗೆ ಉದ್ಯೋಗ ಒದಗಿಸುವಲ್ಲಿಯೂ ಸರ್ಕಾರ ವಿಫಲವಾಗಿದ್ದು, ಅವರ ಭವಿಷ್ಯವನ್ನು ಅಪಾಯಕ್ಕೆ ತಳ್ಳುತ್ತಿದೆ. ಈ ವೈಫಲ್ಯಗಳನ್ನು ಮರೆಮಾಚಲು ಸರ್ಕಾರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನಿಸುವ ಮಾರ್ಗವನ್ನು ಅನುಸರಿಸುತ್ತಿದೆ ಎಂದರು.
ಹಿರಿಯ ರೈತ ಹೋರಾಟಗಾರ ಅರವಿಂದ ಕುಲಕರ್ಣಿ ಮಾತನಾಡಿ, ದೆಹಲಿಯಲ್ಲಿ ವಿದ್ಯಾರ್ಥಿ ಮತ್ತು ಯುವ ಜನರ ಹೋರಾಟದ ಸಂದರ್ಭ ಕೇಂದ್ರ ಸರ್ಕಾರ ನಡೆದುಕೊಂಡ ರೀತಿ ಅಮಾನವೀಯ. ಭಾರತದ ಇತಿಹಾಸದಲ್ಲಿ ಇದೊಂದು ಕರಾಳ ದಿನವಾಗಲಿದೆ ಎಂದರು.
ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, ಎಐಡಿವೈಒ ಜಿಲ್ಲಾಧ್ಯಕ್ಷ ಶ್ರೀಕಾಂತ ಕೊಂಡಗೂಳಿ, ಜಂಟಿ ಕಾರ್ಯದರ್ಶಿ ಅಶೋಕ ದೇಸಾಯಿ, ಎಐಎಂಎಸ್‌ಎಸ್ ಜಿಲ್ಲಾ ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗೂಳಿ, ಜಂಟಿ ಕಾರ್ಯದರ್ಶಿ ಶಿವರಂಜನಿ ಎಸ್.ಬಿ, ವಿವಿಧ ಕಾಲೇಜಿನ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, ರೈತರು, ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.