ವಿಜಯಪುರ ನಗರದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ ನೀಡಿ ಪರಿಶೀಲಿಸಿದರು. 
ರಾಜ್ಯ

ಪರೀಕ್ಷೆ ಎದುರಿಸಲು ಆತಂಕರಹಿತ ವಾತಾವರಣ ಸೃಷ್ಟಿಸಿ

ಮಾರುತಿ ತಳ್ಳಳ್ಳಿ

ಪ್ರಮುಖ ಮುಖ್ಯಾಂಶಗಳು

  • ಪರೀಕ್ಷಾ ಕೇಂದ್ರಗಳಿಗೆ ಸಿಇಒ ಭೇಟಿ
ವಿಜಯಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿ ಹಾಗೂ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಸೋಮವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾದ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರೀಕ್ಷೆಗಳ ನೇರ ವೀಕ್ಷಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ತಾಂತ್ರಿಕ ವ್ಯವಸ್ಥೆಗಳು ದೋಷ ರಹಿತವಾಗಿ ಕಾರ್ಯ ನಿರ್ವಹಿಸುವಂತೆ ನಿರಂತರ ನಿಗಾವಹಿಸಬೇಕು ಎಂದು ಸೂಚಿಸಿದರು. ಬಳಿಕ ಶಾಮ್ಸ್ ಪ್ರೌಢಶಾಲೆ, ಬಂಜಾರ ಪ್ರೌಢ ಶಾಲೆ ಹಾಗೂ ಚೇತನಾ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.
‘ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತಾಗಲು ಸೂಕ್ತ ವಾತಾವರಣ ಕಲ್ಪಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳು, ವೆಬ್ ಕಾಸ್ಟಿಂಗ್ ವ್ಯವಸ್ಥೆ, ಪ್ರಥಮ ಚಿಕಿತ್ಸೆ ಕಿಟ್ ಹಾಗೂ ಕುಡಿಯುವ ನೀರು, ಶೌಚಗೃಹ ಮತ್ತಿತರ ಮೂಲ ಸೌಕರ್ಯಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ಎಲ್ಲವೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಂಡರು.
ಪರೀಕ್ಷಾ ಅವಧಿಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ವಹಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಅನಧಿಕೃತ ವ್ಯಕ್ತಿಗಳ ಸಂಚಾರವನ್ನು ನಿಯಂತ್ರಿಸಬೇಕು. ಪರೀಕ್ಷಾ ಪ್ರಶ್ನೆಪತ್ರಿಕೆಗಳ ಸುರಕ್ಷಿತ ವಿತರಣೆಯ ಬಗ್ಗೆ ವಿಶೇಷ ಗಮನ ಹರಿಸಬೇಕು ಹಾಗೂ ಸಮಯಪಾಲನೆ ಕಟ್ಟುನಿಟ್ಟಾಗಿ ಅನುಸರಿಸಬೇಕು. ಪರೀಕ್ಷಾ ಕರ್ತವ್ಯದಲ್ಲಿರುವ ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ, ಯಾವುದೇ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು. ನೋಡಲ್ ಅಧಿಕಾರಿ ಟಿ.ಎಸ್. ಕೊಲ್ಹಾರ ಮತ್ತಿತರರಿದ್ದರು.

40863 ವಿದ್ಯಾರ್ಥಿಗಳು ಹಾಜರು

ಸೋಮವಾರ ನಡೆದ ಎಸ್‌ಎಲ್‌ಎಲ್‌ಸಿ ಪರೀಕ್ಷೆಗೆ ನೋಂದಾಯಿತ 41738 ವಿದ್ಯಾರ್ಥಿಗಳ ಪೈಕಿ ಪರೀಕ್ಷೆಗೆ 40863 ಹಾಜರಾಗಿದ್ದರು. 875 ವಿದ್ಯಾರ್ಥಿಗಳು ಗೈರು ಉಳಿದಿದ್ದರು. ಯಾವುದೇ ಡಿಬಾರ್ ಆಗಿಲ್ಲ ಎಂದು ಡಿಡಿಪಿಐ ವೀರಯ್ಯ ಸಾಲಿಮಠ ತಿಳಿಸಿದ್ದಾರೆ.