ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ 
ರಾಜ್ಯ

ಬರ ಘೋಷಣೆ ರೈತರ ಸಾಲ ಮನ್ನಾ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ಮತ್ತು ರೈತರ ಸಾಲಮನ್ನಾ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.
ವಿಧಾನಸೌಧದಲ್ಲಿ ಬುಧವಾರ ಮಾತನಾಡಿ, ಬರದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಜನರು ಗುಳೆ ಹೋಗುತ್ತಿದ್ದಾರೆ. ಇಷ್ಟಾದರೂ ಸರ್ಕಾರ ಎಚ್ಚೆತ್ತಿಲ್ಲ ಎಂದು ಟೀಕಿಸಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ದುಪ್ಪಟ್ಟು ಪರಿಹಾರ ನೀಡಿತ್ತು. ಸಿಎಂ ಡಿ.ಕೆ. ಶಿವಕುಮಾರ್ ಬೆಳೆ ಬೆಳೆಯಬಾರದು ಎಂದು ಕರೆ ನೀಡುತ್ತಾರೆ. ಹಾಗಾದರೆ ರೈತರು ಏನು ಮಾಡಬೇಕು? ರಾಜ್ಯದ 157 ತಾಲೂಕುಗಳಲ್ಲಿ ಬರ ಎದುರಾಗಿದ್ದು, ಶೇ.80 ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಜಾನುವಾರುಗಳಿಗೆ ಮೇವಿಲ್ಲದೆ ಸಮಸ್ಯೆ ಸೃಷ್ಟಿಯಾಗಿದೆ.
ಕಂದಾಯ ಸಚಿವರು ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ್ದಾರೆ. 10 ಸಾವಿರ ಕೋಟಿ ರೂ. ಕೇಂದ್ರ ಸರ್ಕಾರ ಕೊಡಬೇಕು ಎಂದಿದ್ದಾರೆ. ವಾಸ್ತವ ಸ್ಥಿತಿ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸದೆ ಅನುದಾನ ಹೇಗೆ ಬಿಡುಗಡೆ ಮಾಡಲು ಸಾಧ್ಯ? ಇವರು ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಿ ಪರಿಹಾರ ಸಿಗುವುದು ಯಾವಾಗ? ಅದಕ್ಕೆ ಮೊದಲು ಎಸ್‌ಡಿಆರ್‌ಎಫ್ ನಿಧಿಯಿಂದ ಹಣ ಬಿಡುಗಡೆ ಮಾಡಿ ಪರಿಹಾರ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಜೂನ್‌ನಲ್ಲಿ ಮಳೆ ಕೊರತೆ ಪ್ರಮಾಣ ಶೇ.42 ಆಗಿದೆ. ರಾಜ್ಯದಲ್ಲಿ 31 ರೈತರು ಈ ಎರಡು ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 2,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.