ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ, ಅದನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ. ವೀರೇಂದ್ರ ಕುಮಾರ್ ಅವರಿಗೆ ಪತ್ರ ಬರೆದಿರುವ ಡಿಸಿಎಂ, ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು 2022ರಲ್ಲಿ ಕಾಯ್ದೆ ರೂಪಿಸಿತ್ತು. 2023ರ ಜನವರಿ 11ರಂದು ರಾಜ್ಯಪಾಲರ ಅಂಕಿತ ಪಡೆದ ಈ ಕಾಯ್ದೆಯು 2022ರ ನವೆಂಬರ್ 1ರಿಂದ ಅನ್ವಯವಾಗುವಂತೆ ಜಾರಿಗೆ ಬಂದಿತ್ತು ಎಂಬುದನ್ನು ತಿಳಿಸಿದ್ದಾರೆ.
ಸುಮಾರು ಏಳು ದಶಕಗಳಿಂದ ಈ ಸಮುದಾಯಗಳ ಮೀಸಲಾತಿ ಪ್ರಮಾಣದಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ. 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ.17.15 ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ.6.95ರಷ್ಟಿದೆ. ಈ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸಿ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗವು ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಅಲ್ಲದೆ, ಈ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸಲು 9ನೇ ಅನುಸೂಚಿಗೆ ಸೇರಿಸುವಂತೆಯೂ ಸಲಹೆ ನೀಡಿತ್ತು ಎಂದಿದ್ದಾರೆ.
ಮೀಸಲಾತಿ ಪ್ರಮಾಣವನ್ನು ಒಟ್ಟು ಶೇ.56ಕ್ಕೆ ಹೆಚ್ಚಿಸುವುದು ಶೇ.50ರ ಮೀಸಲಾತಿ ಮಿತಿಯನ್ನು ಮೀರಿದಂತಾಗುತ್ತದೆ ಎಂಬ ಕಾರಣಕ್ಕೆ ಕರ್ನಾಟಕ ಹೈಕೋರ್ಟ್ 2026ರ ಅಕ್ಟೋಬರ್ 12ರಂದು ಮೀಸಲಾತಿ ಹೆಚ್ಚಳದ ನಿಬಂಧನೆಗಳನ್ನು ರದ್ದುಗೊಳಿಸಿದೆ. ಈ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿರುವುದಾಗಿಯೂ ಉಲ್ಲೇಖಿಸಿದ್ದಾರೆ.
ತಮಿಳುನಾಡಿನಲ್ಲಿ ಶೇ.69ರ ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸುವ ಉದ್ದೇಶದಿಂದ 1994ರಲ್ಲಿ ಸಂವಿಧಾನದ 76ನೇ ತಿದ್ದುಪಡಿ ಮೂಲಕ ಅಲ್ಲಿನ ಮೀಸಲಾತಿ ಕಾಯ್ದೆಯನ್ನು 9ನೇ ಅನುಸೂಚಿಗೆ ಸೇರಿಸಲಾಗಿತ್ತು. ಇದೇ ಮಾದರಿಯಲ್ಲಿ ಕರ್ನಾಟಕದ ಶೇ.56ರ ಮೀಸಲಾತಿಗೂ ಸಂವಿಧಾನಾತ್ಮಕ ರಕ್ಷಣೆ ಒದಗಿಸುವ ಕುರಿತು ಕೇಂದ್ರ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಪರಮೇಶ್ವರ್ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಕರ್ನಾಟಕ ಸರ್ಕಾರವು 2023ರ ಮಾರ್ಚ್ 23ರಂದೇ ಈ ಸಂಬಂಧ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. 2025ರ ಡಿಸೆಂಬರ್ 18ರಂದು ರಾಜ್ಯ ವಿಧಾನಸಭೆಯಲ್ಲಿಯೂ ಈ ಕುರಿತು ನಿರ್ಣಯ ಅಂಗೀಕರಿಸಲಾಗಿದೆ. ಅಲ್ಲದೆ, 2026ರ ಏಪ್ರಿಲ್ 16ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದರು. ಆದರೂ, ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ ಎಂಬ ಕಾರಣ ನೀಡಿ ಕೇಂದ್ರ ಸರ್ಕಾರ ಈ ವಿಷಯವನ್ನು ಮುಂದೂಡಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿದೆ ಎಂಬ ಕಾರಣಕ್ಕೆ ಸಾಮಾಜಿಕ ನ್ಯಾಯದ ಉದ್ದೇಶವನ್ನು ಅನಿರ್ದಿಷ್ಟಾವಧಿಗೆ ಮುಂದೂಡಬಾರದು. ಸಂವಿಧಾನಾತ್ಮಕ ಸಮಸ್ಯೆಗಳನ್ನು ಪರಿಹರಿಸುವುದರ ಜತೆಗೆ ಹಿಂದುಳಿದ ಸಮುದಾಯಗಳ ಶೈಕ್ಷಣಿಕ ಮತ್ತು ಉದ್ಯೋಗಾವಕಾಶಗಳನ್ನು ರಕ್ಷಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಜವಾಬ್ದಾರಿಯಾಗಿದೆ ಎಂದು ಡಾ. ಪರಮೇಶ್ವರ ಅವರು ಪ್ರತಿಪಾದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳು ಖುದ್ದು ಮಧ್ಯಪ್ರವೇಶಿಸಿ, ಕರ್ನಾಟಕದ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು 9ನೇ ಅನುಸೂಚಿಗೆ ಸೇರಿಸಲು ಅಗತ್ಯವಾದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಆರಂಭಿಸಬೇಕು. ಇದರೊಂದಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಹಾಗೂ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಹೇಳಿದ್ದಾರೆ.
ಕೇಂದ್ರದ ಕಾನೂನು ಮತ್ತು ನ್ಯಾಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಬುಡಕಟ್ಟು ವ್ಯವಹಾರಗಳು ಹಾಗೂ ಗೃಹ ಸಚಿವಾಲಯಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಬೇಕು. ದೇಶದ ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಗೆ ಅನುಗುಣವಾಗಿ ಶೇ.50ರ ಮೀಸಲಾತಿ ಮಿತಿಯ ಪ್ರಸ್ತುತತೆಯ ಕುರಿತು ರಾಷ್ಟ್ರಮಟ್ಟದಲ್ಲಿ ವ್ಯಾಪಕ ಚರ್ಚೆ ನಡೆಸುವ ಅಗತ್ಯವಿದೆ ಎಂದೂ ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ಸಾಮಾಜಿಕ ನ್ಯಾಯದ ವಿಚಾರವು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿದ್ದು, ಶತಮಾನಗಳಿಂದ ಅವಕಾಶ ವಂಚಿತರಾದ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನ ಅವಕಾಶ ಕಲ್ಪಿಸುವುದು ರಾಷ್ಟ್ರದ ಸಾಮೂಹಿಕ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ದೀರ್ಘಕಾಲದ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ, ನಿಗದಿತ ಅವಧಿಯೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಡಾ. ಜಿ. ಪರಮೇಶ್ವರ್ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಎಸ್ಸಿ ಮೀಸಲಾತಿಯನ್ನು ಶೇ.17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸುವ ಕಾಯ್ದೆಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಬೇಕು.
ಈ ಸಂಬಂಧ ಅಗತ್ಯವಾದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು.
ರಾಷ್ಟ್ರೀಯ ಎಸ್ಸಿ ಮತ್ತು ಎಸ್ಟಿ ಆಯೋಗಗಳೊಂದಿಗೆ ಸಮಾಲೋಚನೆ ನಡೆಸಿ, ನ್ಯಾಯಾಲಯ ಗುರುತಿಸಿರುವ ಸಂವಿಧಾನಾತ್ಮಕ ಹಾಗೂ ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕು.
ಸಂಬಂಧಪಟ್ಟ ಕೇಂದ್ರ ಸಚಿವಾಲಯಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾಲಮಿತಿಯೊಳಗೆ ನಿರ್ಧಾರ ಕೈಗೊಳ್ಳಬೇಕು.
ದೇಶದಲ್ಲಿ ಶೇ.50ರ ಮೀಸಲಾತಿ ಮಿತಿಯ ಕುರಿತು ರಾಷ್ಟ್ರಮಟ್ಟದಲ್ಲಿ ಮರುಪರಿಶೀಲನೆ ಮತ್ತು ವ್ಯಾಪಕ ಚರ್ಚೆ ನಡೆಸಬೇಕು.
ತಮಿಳುನಾಡಿನ ಶೇ.69ರ ಮೀಸಲಾತಿಗೆ ನೀಡಿರುವ ಸಂವಿಧಾನಾತ್ಮಕ ರಕ್ಷಣೆಯ ಮಾದರಿಯಲ್ಲಿಯೇ ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಟ್ಟು ಶೇ.24ರ ಮೀಸಲಾತಿಗೂ ರಕ್ಷಣೆ ಒದಗಿಸಿ, ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಬೇಕು ಎಂಬುದು ಡಾ. ಜಿ. ಪರಮೇಶ್ವರ ಅವರ ಪತ್ರದ ಒಟ್ಟಾರೆ ಆಶಯವಾಗಿದೆ.