- * ಆರೋಗ್ಯ ಇಲಾಖೆ ಸಿಬ್ಬಂದಿಗೆ ಸರ್ಕಾರ ಎಚ್ಚರಿಕೆ
ಬೆಂಗಳೂರು: ಬಡ್ತಿ, ವೇತನ ಪರಿಷ್ಕರಣೆ ಸೇರಿ ಸೇವಾ ಸಂಬಂಧಿತ ಬೇಡಿಕೆಗಳ ಈಡೇರಿಕೆಗಾಗಿ ಆಯೋಗ್ಯ ಸಿಬ್ಬಂದಿ ಪ್ರತಿಭಟನೆ ನಡೆಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಸಾರ್ವಜನಿಕ ಆರೋಗ್ಯ ಸೇವೆಗಳಿಗೆ ಅಡ್ಡಿಪಡಿಸದಂತೆ ನೌಕರರು ಕಾನೂನಿನ ಅಡಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ. ವೈದ್ಯರು ಹಾಗೂ ಇತರ ಸಿಬ್ಬಂದಿ ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ಹೊಂದಿರುವುದರಿಂದ ಸಾಮೂಹಿಕ ಮುಷ್ಕರದಂತಹ ಕ್ರಮಗಳಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಕಾನೂನಿನ ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಆಯುಕ್ತ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಹಾಗೂ ಇಲಾಖೆಯ ಎಲ್ಲ ವೃಂದಗಳು ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಮುಂಬಡ್ತಿ, ಕರ್ತವ್ಯದ ಬಳಿಕ ಖಾಸಗಿ ವ್ಯವಸ್ಥೆಯಡಿ ಚಿಕಿತ್ಸೆಗೆ ಅವಕಾಶ ಸೇರಿ 14 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದು, ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಿದ್ದಾರೆ.
ಬೇಡಿಕೆಗಳ ಈಡೇರಿಕೆಗೆ ಕ್ರಮ: ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಮಗ್ರ ತಿದ್ದುಪಡಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ 450 ವೈದ್ಯರಿಗೆ ಕಾಲಮಿತಿ ಮುಂಬಡ್ತಿ ನೀಡಲಾಗಿದೆ. 75 ಮಂದಿಯನ್ನು ಶುಶ್ರೂಷಾಧಿಕಾರಿ ಹುದ್ದೆಗೆ ಪದೋನ್ನತಿ ಮಾಡಲಾಗಿದೆ. ಎಲ್ಲ ವೃಂದದ ಸಿಬ್ಬಂದಿಗೆ ಪದೋನ್ನತಿ ನೀಡಲು ಶೀಘ್ರ ಕ್ರಮವಹಿಸಲಾಗುವುದು. ಇದೇ ಪ್ರಥಮ ಬಾರಿಗೆ ಕಳೆದ ವರ್ಷ 5,700 ವೈದ್ಯರ ಹಾಗೂ ಇತರ ಸಿಬ್ಬಂದಿಯನ್ನು ಪಾರದರ್ಶಕವಾಗಿ ವರ್ಗಾವಣೆ ಮಾಡಲಾಗಿದೆ. ಔಷಧಗಳ ಸಮರ್ಪಕ ಪೂರೈಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮವಹಿಸಲಾಗಿದೆ. ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಉತ್ತಮ ವೇತನ, ವಿಶೇಷ ಭತ್ಯೆ, ಪ್ರೋತ್ಸಾಹಧನ ಒದಗಿಸಲಾಗುತ್ತಿದೆ ಎಂದು ಆಯುಕ್ತರು ಹೇಳಿದ್ದಾರೆ.