- ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ
- ತಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆ; ಡಿಕೆಶಿ
- ದೇಶದ ಜನತೆ ನನ್ನ ಮೇಲಿಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ನಾನು ಸದಾ ಕೃತಜ್ಞನಾಗಿರುತ್ತೇನೆ
- ಇಂದು ಇಡೀ ಜಗತ್ತೇ ಬೆಂಗಳೂರು ಮತ್ತು ಕರ್ನಾಟಕದ ಮೂಲಕ ಭಾರತವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಈ ವಿಷಯವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ವಾಸ್ತವವನ್ನು ಒಪ್ಪಿಕೊಂಡಿರುವ ನಿಯೋಜಿತ ಸಿಎಂ ಡಿಕೆಶಿ, ತಮ್ಮ ಸರ್ಕಾರದ ಮುಂದಿನ ಹಾದಿ ಅಷ್ಟು ಸುಲಭವಲ್ಲ ಎಂದಿದ್ದಾರೆ.
ಡಿಕೆ ಶಿವಕುಮಾರ್ ಹೇಳಿದ್ದಿಷ್ಟು!
ದೇಶದ ಜನತೆ ನನ್ನ ಮೇಲಿಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ನಾನು ಸದಾ ಕೃತಜ್ಞ. ಮುಂದಿರುವ ದಾರಿ ಸುಲಭವಲ್ಲ ಮತ್ತು ಸವಾಲುಗಳಿಂದ ಕೂಡಿದೆ ಎಂಬ ಅರಿವು ನನಗಿದೆ. ಆದರೂ, ಎಂತಹ ಕಠಿಣ ಪರಿಸ್ಥಿತಿಯಲ್ಲೂ ಜನರ ನಿರೀಕ್ಷೆಗೆ ತಕ್ಕಂತೆ ನಾನು ಅತ್ಯಂತ ಪ್ರಾಮಾಣಿಕವಾಗಿ ಹಾಗೂ ಕಷ್ಟಪಟ್ಟು ಕೆಲಸ ಮಾಡುತ್ತೇನೆ.
ಇಂದು ಇಡೀ ಜಗತ್ತೇ ಬೆಂಗಳೂರು ಮತ್ತು ಕರ್ನಾಟಕದ ಮೂಲಕ ಭಾರತವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಹಿನ್ನೆಲೆಯಲ್ಲಿ, ನಮ್ಮ ಇಡೀ ಆಡಳಿತ ವ್ಯವಸ್ಥೆಯನ್ನು ಹೊಸದಾಗಿ ಮರುರೂಪಿಸುವುದು ನನ್ನ ಗುರಿಯಾಗಿದೆ. ರೈತರು, ಮಹಿಳೆಯರು ಹಾಗೂ ಯುವಜನತೆ ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ಕರೆದೊಯ್ಯುವ ಮೂಲಕ, ಕರ್ನಾಟಕದಲ್ಲಿ ಇಂದಿನಿಂದ ಒಂದು ಹೊಸ ಯುಗ ಆರಂಭವಾಗಲಿದೆ ಎಂದು ತಿಳಿಸಿದರು.
ರಾಜ್ಯ ರಾಜಕಾರಣದಲ್ಲಿ ಚತುರ ನಡೆಗಳ ನಾಯಕ, ಟ್ರಬಲ್ ಶೂಟರ್ ಎಂದೇ ಖ್ಯಾತರಾದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಕೊನೆಗೂ ಮುಖ್ಯಮಂತ್ರಿ ಗದ್ದುಗೆಯನ್ನು ಏರುತ್ತಿದ್ದಾರೆ. ಸತತ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಬಹುಕಾಲದ ಕನಸು ಇಂದು (ಜೂನ್ 3) ನನಸಾಗುತ್ತಿದೆ.
ಮೇ 30 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಅವರು, ಇಂದು ಅಧಿಕೃತವಾಗಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ, ಇಂದು ಸಂಜೆ ಸರಿಯಾಗಿ 4:05 ಗಂಟೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಅವರೊಂದಿಗೆ ಕೆಲ ಸಚಿವರೂ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಂಗಳವಾರವೇ (ಜೂನ್ 2) ಲೋಕ ಭವನದಲ್ಲಿ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದವು. ರಾಜ್ಯದ ಮೂಲೆ ಮೂಲೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಬೆಂಗಳೂರಿಗೆ ಹರಿದು ಬರುತ್ತಿರುವುದರಿಂದ ನಗರದಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮಾರಂಭವನ್ನು ವ್ಯವಸ್ಥಿತವಾಗಿ ಆಯೋಜಿಸಲಾಗಿದೆ (ಏಜೆನ್ಸೀಸ್).