ಘಟನೆಯ ಸ್ಥಳ 
ರಾಜ್ಯ

ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್ ಪಲ್ಟಿ: ಇಬ್ಬರು ಸಾವು, 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ | Accident

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಧುವನಹಳ್ಳಿ ಬಳಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ(Accident) ಸಂಭವಿಸಿದ್ದು, ಪರಿಣಾಮ ಇಬ್ಬರು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬೈಪಾಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದ ಮಹೇಶ್, ಕೊಳ್ಳೇಗಾಲ ಪಟ್ಟಣದ ಭೀಮನಗರ ಪುಟ್ಟಮಲ್ಲಮ್ಮ ಎಂದು ಗುರುತಿಸಲಾಗಿದೆ. ಉಳಿದ ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗೆ ದಾಖಲಿಸಲಾಗಿದೆ.
ಗಾಯಾಳುಗಳಲ್ಲಿ ಕೆಲವರಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಹಿನ್ನೆಲೆ ಚಾಮರಾಜನಗರ ಮತ್ತು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೂ ಪ್ರತ್ಯೇಕ ಘಟನೆಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾಪುರ ಬಳಿ ವೇಗವಾಗ ಲಾರಿಯೊಂದು ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ ಎನ್ನಲಾಗಿದೆ. ನವಚೇತನ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಕುರುಗೋಡು ತಾಲೂಕು ಎಮ್ಮಿಗನೂರಿನ ಜಗದೀಶ್ (28) ಮತ್ತು ಓರ್ವಾಯಿ ಗ್ರಾಮದ ದೊಡ್ಡಬಸಪ್ಪ (26) ಮೃತರು. ಕುಡತಿನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.