ಹೆಬ್ಬಾಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಂಡಿದ್ದರು. 
ರಾಜ್ಯ

ವಿದ್ಯಾವಂತರಿಂದಲೇ ಹೆಣ್ಣು ಭ್ರೂಣ ಹತ್ಯೆ ಹೆಚ್ಚಳ

ಪ್ರಮುಖ ಮುಖ್ಯಾಂಶಗಳು

  • ಶರಣ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಹೆಬ್ಬಾಳು ಹಾಲಪ್ಪ
  • ಹೆಬ್ಬಾಳು ಗ್ರಾಮ ಪಂಚಾಯಿತಿ ಆವರಣ
ಬೇಲೂರು: ಇತ್ತೀಚಿನ ದಿನಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ವಿದ್ಯಾವಂತರಿಂದಲೇ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದಾಗ ಮಾತ್ರ ಇದನ್ನು ತಡೆಗಟ್ಟಲು ಸಾಧ್ಯ ಎಂದು ಶರಣ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗುರುವಾರ ತಾಲೂಕಿನ ಹೆಬ್ಬಾಳು ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 12ನೇ ಶತಮಾನದ ಶರಣರು ಸಮಾನತೆಯ ಸಂದೇಶ ಸಾರಿದರಾದರೂ ಇಂದಿಗೂ ಮಹಿಳೆಯರ ಬಗ್ಗೆ ಕೀಳರಿಮೆ ಮನೋಭಾವ ಮುಂದುವರಿದಿರುವುದು ಸರಿಯಲ್ಲ. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದರೂ ಸಮಾಜದ ದೃಷ್ಟಿಕೋನ ಬದಲಾಗಿಲ್ಲ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಹೆಬ್ಬಾಳು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅನುಪಮಾಶೆಟ್ಟಿ ಮಾತನಾಡಿ, 2015ರಲ್ಲಿ ಪ್ರಾರಂಭವಾದ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ, ಆರೋಗ್ಯ, ಸುರಕ್ಷತೆ ಹಾಗೂ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ರಾಷ್ಟ್ರೀಯ ಕಾರ್ಯಕ್ರಮವಾಗಿದೆ. ಹೆಣ್ಣು ಮಗು ಕುಟುಂಬ ಹಾಗೂ ಸಮಾಜದ ಅಮೂಲ್ಯ ಸಂಪತ್ತಾಗಿದ್ದು, ಆಕೆಗೆ ಸುರಕ್ಷಿತ ಮತ್ತು ಆರೋಗ್ಯಕರ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬರ ಹೊಣೆಗಾರಿಕೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹನಿಕೆ ವೃತ್ತದ ಮೇಲ್ವಿಚಾರಕಿ ತೇಜಸ್ವಿನಿ ಮಾತನಾಡಿ, ಹೆಣ್ಣು ಉಳಿದರೆ ಕುಟುಂಬ ಉಳಿಯುತ್ತದೆ, ಹೆಣ್ಣು ಬೆಳೆದರೆ ದೇಶ ಬೆಳೆಯುತ್ತದೆ ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಹೆಣ್ಣು-ಗಂಡು ಲಿಂಗಾನುಪಾತ ಸುಧಾರಣೆ ಹಾಗೂ ಮಹಿಳೆಯರ ಬಗ್ಗೆ ಗೌರವದ ಮನೋಭಾವ ಬೆಳೆಸುವ ಉದ್ದೇಶದಿಂದ ಗ್ರಾಪಂಗಳು, ಮಹಿಳಾ ಸಂಘಗಳು ಮತ್ತು ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಹೆಬ್ಬಾಳು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅಶೋಕ್‌ಕುಮಾರ್, ಪ್ರೌಢಶಾಲಾ ಶಿಕ್ಷಕ ನಾಗರಾಜ್, ಗ್ರಂಥಪಾಲಕ ಮಂಜೇಗೌಡ, ಸಿಬ್ಬಂದಿ ವಿಶಾಲಾಕ್ಷಿ, ಲತಾ ಇತರರಿದ್ದರು.