ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ
ಬೆಂಗಳೂರು: ನಗರ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮತ್ತು ಜನಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಪಂಚ ಅಂಶಗಳ ಕಾರ್ಯಸೂಚಿ ರೂಪಿಸಿಕೊಳ್ಳುವಂತೆ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಹಣೆ, ಪ್ರಸ್ತುತ ಸ್ಥಿತಿಗತಿ ಮತ್ತು ಅವುಗಳು ಎದುರಿಸುತ್ತಿರುವ ವಿವಿಧ ಸಮಸ್ಯೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಅಗತ್ಯ ಸೂಚನೆಗಳನ್ನು ನೀಡಿದರು.
ಶುದ್ಧ ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ, ಒಳಚರಂಡಿ ವ್ಯವಸ್ಥೆ, ಬೀದಿ ದೀಪಗಳ ನಿರ್ವಹಣೆ, ತೆರಿಗೆ ಸಂಗ್ರಹಣೆಗೆ ಮೊದಲ ಆದ್ಯತೆ, ನಿರಂತರ ಮೇಲ್ವಿಚಾರಣೆ ನಡೆಸಿ ಜನರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.
ಆಸ್ತಿ ಮೂಲಗಳನ್ನು ಗುರುತಿಸಿ, ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು. ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಪತ್ತೆಹಚ್ಚಿ, ತೆರಿಗೆ ವ್ಯಾಪ್ತಿಗೆ ತರಬೇಕು. ಪ್ರತಿಯೊಂದು ನಗರ ಸ್ಥಳೀಯ ಸಂಸ್ಥೆಗೆ ವಾಸ್ತವಿಕ ತೆರಿಗೆ ಸಂಗ್ರಹಣೆ ಗುರಿ ನಿಗದಿಪಡಿಸಿ, ಗುರಿ ಸಾಧಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ತೆರಿಗೆ ಸಂಗ್ರಹದಲ್ಲಿ ನಿರಂತರವಾಗಿ ವಿಫಲವಾಗುವ ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿ ಮತ್ತು ಮುಖ್ಯಾಧಿಕಾರಿಗಳ ಹೊಣೆಗಾರಿಕೆಯನ್ನು ನಿಗದಿಪಡಿಸುವ ಕುರಿತು ಅಗತ್ಯ ಕ್ರಮಕ್ಕೆ ಸಚಿವರು ತಿಳಿಸಿದರು.
ಗುಣಮಟ್ಟ ಸುಧಾರಣೆ
ಮುಖ್ಯಾಧಿಕಾರಿಗಳು ಹಾಗೂ ನಗರಸಭೆ ಆಯುಕ್ತರು ಇಂದಿರಾ ಕ್ಯಾಂಟಿನ್‌ಗಳಿಗೆ ನಿಯಮಿತವಾಗಿ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಛತೆ, ಜನರಿಗೆ ಒದಗಿಸುವ ಸೇವೆಗಳ ಗುಣಮಟ್ಟವನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು. ಇಂದಿರಾ ಕ್ಯಾಂಟಿನ್ ಕಾರ್ಯನಿರ್ವಹಣೆಯಲ್ಲಿ ಅಗತ್ಯ ಸುಧಾರಣೆ ತರಲು ಸಮಿತಿ ರಚಿಸಿ, ಸಮಗ್ರ ವರದಿ ಪಡೆಯುವಂತೆ ತಿಳಿಸಿದರು.
ಮುಖ್ಯಮಂತ್ರಿ ಜತೆಗೆ ಚರ್ಚೆ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ 14ನೇ ಹಾಗೂ 16ನೇ ಹಣಕಾಸು ಆಯೋಗಗಳ ಅನುದಾನ ಹಂಚಿಕೆಯಲ್ಲಿ ಆಗಿರುವ ತಾರತಮ್ಯವನ್ನು ಸರಿಪಡಿಸುವಂತೆ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಮುಖ್ಯಮಂತ್ರಿಗಳೊಂದಿಗೆ ನಿಯೋಗ ತೆರಳುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು.