ಕಾರು ಮತ್ತು ಸಿಎನ್‌ಜಿ ಆಟೋ ನಡುವೆ ಮುಖಾಮುಖಿ ಡಿಕ್ಕಿ
- ಹಾನುಬಾಳು ಸಮೀಪ
- ಕಾರು ಮತ್ತು ಸಿಎನ್‌ಜಿ ಆಟೋ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿ
ಸಕಲೇಶಪುರ: ತಾಲೂಕಿನ ಹಾನುಬಾಳು ಸಮೀಪ ಶುಕ್ರವಾರ ಕಾರು ಮತ್ತು ಸಿಎನ್‌ಜಿ ಆಟೋ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಆಟೋದಲ್ಲಿದ್ದ ನಾಲ್ವರು ಗಾಯಗೊಂಡಿದ್ದರೆ, ಅಪಘಾತದ ತೀವ್ರತೆಗೆ ಆಟೋ ಸಂಪೂರ್ಣ ಸುಟ್ಟು ಕರಕಲಾಗಿದೆ.
ಡಿಕ್ಕಿಯ ರಭಸಕ್ಕೆ ಆಟೋ ರಸ್ತೆ ಬದಿಗೆ ಪಲ್ಟಿಯಾಗಿದೆ. ಬಳಿಕ ಆಟೋಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರಾದರೂ ಅಷ್ಟರಲ್ಲೇ ಆಟೋ ಸಂಪೂರ್ಣ ಸುಟ್ಟು ಹೋಗಿತ್ತು. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಸ್ಥಳೀಯರು ಹಾಗೂ ಸಾರ್ವಜನಿಕರು ರಕ್ಷಿಸಿ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ಪಡೆದ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.