ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ವಿನೂನತ ಪ್ರತಿಭಟನೆ
ಕುಡಿಯುವ ನೀರು ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿರುವ ಗ್ರಾಮ ಪಂಚಾಯಿತಿ ಆಡಳಿತದ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು, ಕಚೇರಿಯ ಮುಖ್ಯ ದ್ವಾರಕ್ಕೆ ಮುಳ್ಳುಕಂಠಿಗಳನ್ನು ಕಟ್ಟಿ ವಿನೂತನವಾಗಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ನಡೆದಿದೆ.
ಸುಮಾರು 8 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮವಾದ ಕೋಟುಮಚಗಿಯಲ್ಲಿ ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಪೂರೈಕೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ತುಂಗಭದ್ರಾ ನದಿಯಿಂದ ಗ್ರಾಮಕ್ಕೆ ನೀರು ಪೂರೈಕೆಯಾಗುತ್ತಿದ್ದರೂ ಅದನ್ನು ಸಮರ್ಪಕವಾಗಿ ವಿತರಣೆ ಮಾಡುವಲ್ಲಿ ಗ್ರಾಪಂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಕಳೆದ ಎರಡು ತಿಂಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದರೂ ಗ್ರಾ.ಪಂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿಂದೆಯೂ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದೆವೆ. ಮೌಖಿಕವಾಗಿ ಪಿಡಿಒಗಳಿಗೆ ತಿಳಿಸಿದ್ದರೂ ನಮ್ಮ ಸಮಸ್ಯೆ ಪರಿಹಾರವಾಗಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳು ಖುದ್ದಾಗಿ ನಮ್ಮ ಗ್ರಾಮಕ್ಕೆ ಭೇಟಿ ನೀಡಿ, ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವವರೆಗೂ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ತಾಪಂ ಇಒ ಡಾ. ಜಿನಗಾ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ, ಜನರ ಅಹವಾಲು ಸ್ವೀಕರಿಸಿದರು. ಖುದ್ದು ಸ್ಥಳ ಪರಿಶೀಲನೆ ನಡೆಸಿ, ನೀರು ಪೂರೈಕೆಯಲ್ಲಿರುವ ಸಮಸ್ಯೆಯನ್ನು ಗ್ರಾಮಸ್ಥರ ಜೊತೆಗೂಡಿ ವೀಕ್ಷಿಸಿ, ವಾರದಲ್ಲಿ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂಪಡೆದರು.