ಸ್ಮಶಾನ ಭೂಮಿ ಇಲ್ಲದಕ್ಕೆ ಹೊಸುರು ಗ್ರಾಮದ ಮಧ್ಯದಲ್ಲೇ ಅಂತ್ಯ ಸಂಸ್ಕಾರ ನಡೆಸಲು ಗ್ರಾಮಸ್ಥರು ಸಿದ್ಧತೆ ಮಾಡಿಕೊಂಡಿದ್ದರು.
ಗ್ರಾಮಕ್ಕೆ ಶಾಶ್ವತ ಸ್ಮಶಾನ ಇಲ್ಲದ ಹಿನ್ನೆಲೆಯಲ್ಲಿ ಮೃತ ಮಹಿಳೆಯ ಅಂತ್ಯ ಸಂಸ್ಕಾರವನ್ನು ಗ್ರಾಮದ ಮಧ್ಯಭಾಗದಲ್ಲಿರುವ ಬಸ್ ನಿಲ್ದಾಣದ ಎದುರಲ್ಲೇ ನಡೆಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ ಟನೆ ಗದಗ ತಾಲೂಕಿನ ಹೊಸೂರು ಗ್ರಾಮದಲ್ಲಿ ಬುಧವಾರ ನಡೆದಿದೆ. ಅಧಿಕಾರಿಗಳ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಗ್ರಾಮಕ್ಕೆ ಶಾಶ್ವತ ಸ್ಮಶಾನದ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹೊಸೂರು ಗ್ರಾಮದ 51 ವರ್ಷದ ಬಸವಣ್ಣೆಮ್ಮ ಬೋಳಣ್ಣವರ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಗ್ರಾಮದಲ್ಲಿ ಹಲವು ದಶಕಗಳಿಂದ ಯಾವುದೇ ಸಮುದಾಯದವರು ಮೃತಪಟ್ಟರೂ ಖಾಸಗಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸುವ ಪದ್ಧತಿ ಇತ್ತು. ಆದರೆ, ಈ ಬಾರಿ ಆ ಜಮೀನಿನ ಮಾಲೀಕರಾದ ಬಶೆಟ್ಟಿ ಕುಟುಂಬಸ್ಥರು ತಮ್ಮ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ವಿರೋಧ ವ್ಯಕ್ತಪಡಿಸಿದ ಕಾರಣ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮಕ್ಕೆ ಸ್ಮಶಾನ ಇಲ್ಲದಿದ್ದರೆ ಗ್ರಾಮದ ಮಧ್ಯದಲ್ಲೇ ಅಂತ್ಯಸಂಸ್ಕಾರ ಮಾಡುತ್ತೇವೆ ಎಂದು ಪಟ್ಟು ಹಿಡಿದು, ಬಸ್ ನಿಲ್ದಾಣದ ಎದುರು ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಉಪವಿಭಾಗಾಧಿಕಾರಿ ಗಂಗಪ್ಪ, ತಹಶೀಲ್ದಾರ್ ಶ್ರೀನಿವಾಸಮೂತಿರ್ ಹಾಗೂ ಪೋಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದರು
ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಗ್ರಾಮಸ್ಥರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿ, ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಅಲ್ಲದೆ ಜಮೀನಿನ ಮಾಲೀಕರೊಂದಿಗೂ ಚರ್ಚೆ ನಡೆಸಿ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಿದರು. ಅಧಿಕಾರಿಗಳು ಶಾಶ್ವತವಾಗಿ ಸ್ಮಶಾನ ಭೂಮಿ ಒದಗಿಸುವ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು. ಬಶೆಟ್ಟಿ ಕುಟುಂಬದವರನ್ನು ಮನವೊಲಿಸಿ ಅಂತ್ಯಸಂಸ್ಕಾರ ನಡೆಸಲಾಯಿತು.