ಗದಗ 
ರಾಜ್ಯ

ಡಿ. 13 ರಂದು ರಾಷ್ಟ್ರೀಯ ಲೋಕ್ ಅದಾಲತ್: ಜಿಲ್ಲಾ ನ್ಯಾಯಾಧೀಶೆ ನಾಗವೇಣಿ

ಗದಗ: 'ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ ನವದೆಹಲಿ, ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ಡಿ. 13, 2025 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ' ಅಂತ ಜಿಲ್ಲಾ ಸತ್ರ ನ್ಯಾಯಾಧೀಶರಾದ ಶ್ರೀಮತಿ ನಾಗವೇಣಿ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾನಯದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಗಾರರು ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 14 ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 20,172 ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 3,261 ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದರು.
ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳವರು ಡಿಸೆಬಂರ್ 13, 2025 ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಅಂತ ಹೇಳಿದರು.
ಗಂಡ-ಹೆಂಡತಿಯನ್ನು ನಾವು ಬೇರ್ಪಡಿಸುವುದಿಲ್ಲ. ಅವರನ್ನು ಒಂದುಗೂಡಿಸಲು ಪ್ರಯತ್ನವನ್ನು ಕಾನೂನು ಸೇವೆ ಪ್ರಾಧಿಕಾರ ಮಾಡುತ್ತದೆ. ಪ್ರಕರಣ ದಾಖಲಿಸಿದ ದಂಪತಿಗಳು ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಭಾಗವಹಿಸಿ ಸಹಕಾರ ನೀಡಬೇಕು. ಟ್ರಾಪಿಕ್ ದಂಡ ವಸೂಲಾತಿಯಲ್ಲಿ ಶೇ. 50%ರಷ್ಟು ರಿಯಾಯತಿಯನ್ನು ಈಗಾಗಲೇ ನೀಡಲಾಗಿದೆ. ಆರ್.ಟಿ.ಓ ಕಛೇರಿಗಳ ಬಾಕಿ ಹಣವನ್ನು ಪಾವತಿಸಲು ಶೇ. 50% ರಿಯಾಯತಿ ನೀಡಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೋಳ್ಳಬೇಕು ಎಂದರು.
*ಕೋಟ್...*
ಕಳೆದ ಸೆಪ್ಟೆಂಬರ-2025 ರಂದು ಜರುಗಿದ ಲೋಕ ಅದಾಲತ್‌ನಲ್ಲಿ 3,740 ಚಾಲ್ತಿ ಪ್ರಕರಣಗಳನ್ನು ಹಾಗೂ 28,486 ವ್ಯಾಜ್ಯಪೂರ್ವ ಪ್ರಕರಣ ಸೇರಿ ಒಟ್ಟು 32,226 ಪ್ರಕರಣಗಳು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ. ಇದರಲ್ಲಿ ವಿಶೇಷವಾಗಿ 04 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ.
ಸಿ. ಎಸ್ ಶಿವನಗೌಡ್ರ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ