ದಸರಾ ಉದ್ಘಾಟನೆ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಶಿವರಾಜ್ ತಂಗಡಗಿ 
ರಾಜ್ಯ

ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳೇ ಫಿಕ್ಸ್! ‘ಶ್ರೀಗಳು ಆಹ್ವಾನ ತಿರಸ್ಕರಿಸಿದ್ದಾರೆ’ ಎಂಬುದು ಸುಳ್ಳು ಸುದ್ದಿ; ಸಚಿವ ಶಿವರಾಜ್​ ತಂಗಡಗಿ ಸ್ಪಷ್ಟನೆ! Shivaraj Tangadagi

ಮೈಸೂರು ದಸರಾವನ್ನು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಉದ್ಘಾಟಿಸುವುದು ಖಚಿತ. ಶ್ರೀಗಳು ಆಹ್ವಾನ ತಿರಸ್ಕರಿಸಿದ್ದಾರೆಂಬ ಸುದ್ದಿ ಸುಳ್ಳು ಎಂದು ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿಯ ದಸರಾವನ್ನು ಕೊಪ್ಪಳದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸುವುದು ಸಂಪೂರ್ಣ ಖಚಿತವಾಗಿದ್ದು, ಈ ಬಗ್ಗೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಗಳು ಸರ್ಕಾರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂಬರ್ಥದಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಎಂದು ಸಚಿವ ತಂಗಡಗಿ ಖಂಡಿಸಿದ್ದಾರೆ.

ಸ್ಪಷ್ಟನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ವಿಧಾನಸಭೆ ಅಧಿವೇಶದಲ್ಲಿಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಅಧಿಕೃತವಾಗಿ ಘೋಷಣೆ ಮಾಡಿದ ನಂತರವೂ ಕೆಲವರು ವಿನಾಕಾರಣ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಶ್ರೀಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಬಳಿಕವೇ, ಈ ಬಾರಿಯ ದಸರಾ ಉದ್ಘಾಟಕರಾಗಿ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಆಗಮಿಸಲಿದ್ದಾರೆ ಎಂದು ಸೆಪ್ಟೆಂಬರ್ 24 ರಂದು ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದರು.

ಸರ್ಕಾರದ ಕಡೆಯಿಂದ ಅಧಿಕೃತವಾಗಿ ಆಹ್ವಾನಿಸಲು ಸೆಪ್ಟೆಂಬರ್ 28 ರಂದು ಖುದ್ದು ಗವಿಮಠಕ್ಕೆ ಭೇಟಿ ನೀಡುವ ದಿನಾಂಕ ಈಗಾಗಲೇ ನಿಗದಿಯಾಗಿದೆ. ಹೀಗಾಗಿ ಶ್ರೀಗಳು ಒಪ್ಪಿಲ್ಲ ಎಂಬ ಪ್ರಶ್ನೆಯೇ ಇಲ್ಲಿ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ನಾಡಹಬ್ಬ ದಸರಾ ಉದ್ಘಾಟಕರಾಗಿ ಕೊಪ್ಪಳದ ಗವಿ ಸಿದ್ದೇಶ್ವರ ಸ್ವಾಮೀಜಿ ಆಯ್ಕೆ: ಸಿಎಂ ಡಿಕೆಶಿ ಘೋಷಣೆ

ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ!

ನಾಡಹಬ್ಬದ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಹಾಗೂ ವಿನಾಕಾರಣ ತಪ್ಪು ಅಭಿಪ್ರಾಯಗಳನ್ನು ಮೂಡಿಸುವ ದುರುದ್ದೇಶದಿಂದ ಇಂತಹ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಇಂತಹ ಸುಳ್ಳು ಸಂದೇಶಗಳನ್ನು ಅಥವಾ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ದಸರಾ ಮಹೋತ್ಸವ ಹಾಗೂ ಉದ್ಘಾಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾಹಿತಿಗಾಗಿ ಸರ್ಕಾರದ ಅಧಿಕೃತ ಪ್ರಕಟಣೆಗಳನ್ನು ಮಾತ್ರ ಗಮನಿಸಬೇಕು. ಸರ್ಕಾರೇತರ ಯಾವುದೇ ಸುದ್ದಿಗಳನ್ನು ನಂಬಬಾರದೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.