ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಆಗಸ್ಟ್ 31 ರೊಳಗೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗವು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯವು ಜೂನ್ 30 ರಲ್ಲಿದ್ದ ಗಡುವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಿ ಬುಧವಾರ(ಮೇ.20) ಆದೇಶ ಹೊರಡಿಸಿದೆ. ಆದರೆ ಇದರೊಂದಿಗೆ “ಇನ್ನು ಮುಂದೆ ಯಾವುದೇ ರೀತಿಯ ಗಡುವು ವಿಸ್ತರಣೆ ನೀಡುವುದಿಲ್ಲ” ಎಂದು ನ್ಯಾಯಪೀಠ ಸ್ಪಷ್ಟ ಎಚ್ಚರಿಕೆಯನ್ನೂ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರಿದ್ದ ಪೀಠ ಈ ಆದೇಶ ನೀಡಿತು.
ಕರ್ನಾಟಕ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯದಲ್ಲಿ ವಾದ ಮಂಡಿಸಿ, ರಾಜ್ಯದಲ್ಲಿ ನಡೆಯಲಿರುವ ವಿಶೇಷ ಪರಿಶೀಲನಾ ಕಾರ್ಯ (SIR exercise) ಹಿನ್ನೆಲೆಯಲ್ಲಿ ಸಿಬ್ಬಂದಿ ಕೊರತೆ ಉಂಟಾಗಲಿದೆ ಎಂದು ತಿಳಿಸಿದರು. ಇದೇ ಕಾರಣಕ್ಕೆ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಎರಡು ಅಥವಾ ಮೂರು ತಿಂಗಳ ಕಾಲಾವಕಾಶ ಅಗತ್ಯವಿದೆ ಎಂದು ಕೋರಿದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿರಿಯ ವಕೀಲ ಕೆ. ಪರಮೇಶ್ವರ್, ಈ ಹಿಂದೆ ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಭರವಸೆ ನೀಡಿತ್ತು ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಹೀಗಾಗಿ ಮತ್ತೆ ಗಡುವು ವಿಸ್ತರಣೆ ನೀಡುವುದು ಸರಿಯಲ್ಲ ಎಂದು ಅವರು ವಾದಿಸಿದರು. ಆದರೆ, ರಾಜ್ಯ ಸರ್ಕಾರದ ಮನವಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಕೊನೆಯ ಅವಕಾಶವಾಗಿ ಆಗಸ್ಟ್ 31ರವರೆಗೆ ಸಮಯ ನೀಡಲು ಒಪ್ಪಿತು. ಇದೇ ವೇಳೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಕೂಡಾ ಗಡುವು ವಿಸ್ತರಣೆಗೆ ಮನವಿ ಮಾಡಿತ್ತು.
ಪ್ರಕರಣದ ಹಿನ್ನೆಲೆ
ಈ ಪ್ರಕರಣದ ಹಿನ್ನೆಲೆ ಗಮನಿಸಿದರೆ, ಬಿಬಿಎಂಪಿ ಚುನಾವಣೆ ಹಲವು ವರ್ಷಗಳಿಂದ ವಿಳಂಬವಾಗುತ್ತಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ಜನಪ್ರತಿನಿಧಿಗಳಿಲ್ಲದೇ ಪಾಲಿಕೆ ಆಡಳಿತ ಅಧಿಕಾರಿಗಳ ಕೈಯಲ್ಲೇ ನಡೆಯುತ್ತಿದೆ. ಇದರಿಂದ ಬೆಂಗಳೂರು ನಗರದ ನಾಗರಿಕ ಸಮಸ್ಯೆಗಳ ಪರಿಹಾರ ವಿಳಂಬವಾಗುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ.
ಇದೇ ವಿಚಾರವಾಗಿ 2020ರ ಡಿಸೆಂಬರ್ 4ರಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಅಂತಿಮ ಮತದಾರರ ಪಟ್ಟಿ ಪ್ರಕಟವಾದ ಆರು ವಾರಗಳೊಳಗೆ ಬಿಬಿಎಂಪಿ ಚುನಾವಣಾ ಕಾರ್ಯಕ್ರಮ ಘೋಷಿಸಬೇಕು ಎಂದು ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.
ಆದರೆ ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2020ರ ಡಿಸೆಂಬರ್ 18ರಂದು ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿತ್ತು. ಬಳಿಕ 2022ರಲ್ಲಿ ವಾರ್ಡ್‌ಗಳ ಮರುವಿಂಗಡಣೆ ಪ್ರಕ್ರಿಯೆ ಎಂಟು ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.
ಈ ನಡುವೆ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ತಿದ್ದುಪಡಿ ಕಾಯ್ದೆ 2020 ಮೂಲಕ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸಲಾಗಿತ್ತು. ಈ ತಿದ್ದುಪಡಿ ಮಾನ್ಯವೇ ಎಂಬ ಪ್ರಶ್ನೆಯೂ ನ್ಯಾಯಾಲಯದಲ್ಲಿ ಕೇಳಿಬಂದಿತ್ತು.
ಹೈಕೋರ್ಟ್ ತನ್ನ ತೀರ್ಪಿನಲ್ಲಿ ತಿದ್ದುಪಡಿ ಕಾಯ್ದೆಯ ಸಂವಿಧಾನಬದ್ಧತೆಯನ್ನು ಮಾನ್ಯಗೊಳಿಸಿದ್ದರೂ, ಈಗಾಗಲೇ ಚುನಾವಣೆ ನಡೆಯಬೇಕಿದ್ದ ಸಂಸ್ಥೆಗಳಿಗೆ ಹಳೆಯ ನಿಯಮವೇ ಅನ್ವಯವಾಗುತ್ತದೆ ಎಂದು ಹೇಳಿತ್ತು. ಇದೇ ಕಾರಣಕ್ಕೆ 198 ವಾರ್ಡ್‌ಗಳ ಆಧಾರದಲ್ಲಿ ಮೀಸಲಾತಿ ಅಂತಿಮಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು.
ಆದರೆ ಕರ್ನಾಟಕ ಸರ್ಕಾರ ಮಾತ್ರ 243 ವಾರ್ಡ್‌ಗಳಿಗೆ ಚುನಾವಣೆ ನಡೆಯಬೇಕು ಎಂಬ ನಿಲುವು ಮುಂದಿಟ್ಟಿದೆ. ಹೊಸ ತಿದ್ದುಪಡಿ ಕಾಯ್ದೆ ಜಾರಿಯಲ್ಲಿರುವುದರಿಂದ ಅದೇ ಆಧಾರದಲ್ಲಿ ಚುನಾವಣೆ ನಡೆಸಬೇಕು ಎಂದು ಸರ್ಕಾರ ವಾದಿಸಿದೆ.
ಬಿಬಿಎಂಪಿ ಚುನಾವಣೆ ವಿಳಂಬದ ವಿಚಾರ ಬೆಂಗಳೂರು ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡುತ್ತಿದ್ದು, ಚುನಾವಣೆ ನಡೆಸಲು ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸುತ್ತಿವೆ. ಇನ್ನೊಂದೆಡೆ ಸರ್ಕಾರ ಆಡಳಿತಾತ್ಮಕ ಹಾಗೂ ಕಾನೂನು ಸಂಬಂಧಿತ ಸಮಸ್ಯೆಗಳ ಕಾರಣದಿಂದ ಪ್ರಕ್ರಿಯೆ ವಿಳಂಬವಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದೆ.ಈಗ ಸುಪ್ರೀಂ ಕೋರ್ಟ್ ನೀಡಿರುವ ಆಗಸ್ಟ್ 31ರ ಗಡುವು ಅತ್ಯಂತ ಮಹತ್ವದ್ದಾಗಿದೆ. ಈ ಬಾರಿ ಗಡುವಿನೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆಯೇ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ,(ಏಜೆನ್ಸೀಸ್).