ಸರ್ಕಾರಿ ಶಾಲೆಗಳಲ್ಲಿ ಚಿತ್ರೀಕರಣ ನಿಷೇಧಿಸಿ ಸರ್ಕಾರ ಆದೇಶ 
ರಾಜ್ಯ

ಸರ್ಕಾರಿ ಶಾಲೆಗಳಲ್ಲಿ ಚಿತ್ರೀಕರಣ ನಿಷೇಧಿಸಿ ಸರ್ಕಾರ ಆದೇಶ

ಪ್ರಮುಖ ಮುಖ್ಯಾಂಶಗಳು

  • ಶಾಲೆ ಮತ್ತು ಶಾಲಾವರಣದೊಳಗೆ ಖಾಸಗಿ ಮತ್ತು ಶೈಕ್ಷಣಿಕೇತರ ಕಾರ್ಯಕ್ರಮಗಳನ್ನು ನಿಷೇಧಿಸಿ ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು, ಇದರ ಮುಂದುವರಿದ ಭಾಗವಾಗಿ ಚಿತ್ರಕರಣಕ್ಕೂ ನಿಷೇಧ
  • ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸೂರಳ್ಕರ್ ಸುತ್ತೋಲೆ
  • ಚಿತ್ರೀಕರಣದಿಂದ ಪಾಠ-ಪ್ರವಚನಗಳಿಗೆ ಅಡಚಣೆಯಾಗುವುದಲ್ಲದೆ, ವಿದ್ಯಾರ್ಥಿಗಳ ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು.
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ ಮತ್ತು ಶಾಲೆಯ ಆವರಣದಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಚಲನಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ಅಥವಾ ಟಿವಿ ಧಾರಾವಾಹಿಗಳ ಚಿತ್ರೀಕರಣ ನಡೆಸುವುದನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿಷೇಧಿಸಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ. ಶಾಲೆ ಮತ್ತು ಶಾಲಾವರಣದೊಳಗೆ ಖಾಸಗಿ ಮತ್ತು ಶೈಕ್ಷಣಿಕೇತರ ಕಾರ್ಯಕ್ರಮಗಳನ್ನು ನಿಷೇಧಿಸಿ ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು, ಇದರ ಮುಂದುವರಿದ ಭಾಗವಾಗಿ ಚಿತ್ರಕರಣಕ್ಕೂ ನಿಷೇಧ ಹೇರಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸೂರಳ್ಕರ್ ಸುತ್ತೋಲೆ ಹೊರಡಿಸಿದ್ದಾರೆ.
ಚಿತ್ರೀಕರಣದಿಂದ ಪಾಠ-ಪ್ರವಚನಗಳಿಗೆ ಅಡಚಣೆಯಾಗುವುದಲ್ಲದೆ, ವಿದ್ಯಾರ್ಥಿಗಳ ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಚಿತ್ರೀಕರಣದಂತಹ ಪ್ರಕ್ರಿಯೆಗಳು ವಿದ್ಯಾರ್ಥಿಗಳ ಮೇಲೆ ಒತ್ತಡವನ್ನು ಉಂಟುಮಾಡಬಹುದು, ಇದು ಅವರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದೆ.
ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅವರ ಗೌಪ್ಯತೆಯನ್ನು ಕಾಪಾಡುವುದು ಶಾಲಾ ಮುಖ್ಯಸ್ಥರ ಜವಾಬ್ದಾರಿಯಾಗಿದೆ. ಜತೆಗೆ ಅನೇಕ ಪಾಲಕರು ತಮ್ಮ ಮಕ್ಕಳ ಚಿತ್ರಗಳನ್ನು ಅಥವಾ ವಿಡಿಯೋಗಳನ್ನು ಮಾಧ್ಯಮಗಳಲ್ಲಿ ಪ್ರಕಟಿಸಲು ಒಪ್ಪಿಗೆ ನೀಡುವುದಿಲ್ಲ ಎಂಬ ಅಂಶವನ್ನು ಇಲಾಖೆ ಉಲ್ಲೇಖಿಸಿದೆ.

ಶೈಕ್ಷಣಿಕ ವೇಳಾಪಟ್ಟಿಗೆ ಅಡ್ಡಿಯಾಗಬಾರದು

ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅನ್ವಯವಾಗುವಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆ ರೂಪಿಸಿ ಏಕರೂಪದಲ್ಲಿ ಜಾರಿಗೊಳಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಈ ಶೈಕ್ಷಣಿಕ ಕ್ರಿಯಾ ಯೋಜನೆಯಲ್ಲಿ ಶೈಕ್ಷಣಿಕವಲ್ಲದ ಇಂತಹ ಚಟುವಟಿಕೆಗಳಿಗೆ ಯಾವುದೇ ಅವಕಾಶ ಅಥವಾ ಸಮಯ ನಿಗದಿಪಡಿಸಿಲ್ಲ. ಹಾಗೆಯೇ ಶಾಲೆಗಳನ್ನು ಕೇವಲ ಕಲಿಕಾ ಕೇಂದ್ರಗಳನ್ನಾಗಿ ಉಳಿಸಿಕೊಳ್ಳಲು ಮತ್ತು ಅನಗತ್ಯ ಶೈಕ್ಷಣಿಕೇತರ ಚಟುವಟಿಕೆಗಳಿಂದ ಮುಕ್ತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿದೆ.