ನಾಗಮಂಗಲ ತಾಲೂಕಿನ ಉಯ್ಯನಹಳ್ಳಿ ಗ್ರಾಮದ ಹೊರವಲಯದಲ್ಲಿ 35 ಕೋಟಿ ರೂ.ವೆಚ್ಚದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಚಿವ ಎನ್.ಚಲುವರಾಯಸ್ವಾಮಿ ಭೂಮಿ ಪೂಜೆ ನೆರವೇರಿಸಿದರು. ಜಿ.ಆದರ್ಶ, ಸತೀಶ್, ಡಾ.ಎಂ.ಸವಿತಾ, ಶಿವಕುಮಾರ್ ಇತರರಿದ್ದರು.
ನಾಗಮಂಗಲ: ಗ್ರಾಮೀಣ ಪ್ರದೇಶದ ಬಡ ಕುಟುಂಬಗಳ ಶ್ರಮಿಕರ ಮಕ್ಕಳನ್ನು ವಿದ್ಯಾವಂತರನ್ನಾಗಿಸಿ ದೇಶ ಕಟ್ಟುವ ಶಕ್ತಿಗಳನ್ನಾಗಿ ರೂಪಿಸಬೇಕೆಂಬ ಉದ್ದೇಶದಿಂದ ಶ್ರಮಿಕ ವಸತಿ ಶಾಲೆ ನಿರ್ಮಿಸಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ತಾಲೂಕಿನ ಉಯ್ಯನಹಳ್ಳಿ ಗ್ರಾಮದ ಹೊರವಲಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 35 ಕೋಟಿ ರೂ. ವೆಚ್ಚದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಹಳ್ಳಿಗಾಡಿನ ಎಲ್ಲ ವರ್ಗದ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಬೇಕೆಂಬುದು ರಾಜ್ಯ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಹಾಗಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ತಾಲೂಕಿನಲ್ಲಿ ನಾನು ಶಾಸಕ ಸಚಿವನಾದ ಅವಧಿಯಲ್ಲಿ ಹಲವಾರು ಸರ್ಕಾರಿ ಶಾಲಾ ಕಾಲೇಜುಗಳು, ಬಾಲಕ-ಬಾಲಕಿಯರಿಗೆ ಪ್ರತ್ಯೇಕ ಹಾಸ್ಟೆಲ್‌ಗಳು ಹಾಗೂ ವಿವಿಧ ವಸತಿ ಶಾಲೆಗಳನ್ನು ಮಂಜೂರು ಮಾಡಿಸಿ ಸುಸಜ್ಜಿತವಾದ ಕಟ್ಟಡಗಳನ್ನೂ ಸಹ ನಿರ್ಮಿಸಿರುವುದಾಗಿ ತಿಳಿಸಿದರು.
ತಾಲೂಕು ಸೇರಿದಂತೆ ಜಿಲ್ಲೆಯ ಕಾರ್ಮಿಕರ ಮಕ್ಕಳಿಗಾಗಿಯೇ ಉಯ್ಯನಹಳ್ಳಿ ಗ್ರಾಮದ ಹೊರವಲಯದಲ್ಲಿರುವ 7ಎಕರೆ ವಿಸ್ತೀರ್ಣದಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಿಸಲಾಗುತ್ತಿದೆ. ಈ ವಸತಿ ಶಾಲೆಯಲ್ಲಿ ಅರ್ಹ ಶ್ರಮಿಕರ ಮಕ್ಕಳು 6 ರಿಂದ 10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಬಹುದಾಗಿದೆ ಎಂದ ಸಚಿವರು, ಕಟ್ಟಡ ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರಿಸಬೇಕೆಂದು ಎಂದು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ.ಎಂ.ಸವಿತಾ, ತಾಲೂಕು ಕಾರ್ಮಿಕ ನಿರೀಕ್ಷಕ ಶಿವಕುಮಾರ್, ಎಇಇ ಸಿದ್ದಪ್ಪ, ಮನ್‌ಮುಲ್ ನಿರ್ದೇಶಕ ಲಕ್ಷ್ಮೀನಾರಾಯಣ, ಮುಖಂಡರಾದ ಸುನಿಲ್‌ಲಕ್ಷ್ಮೀಕಾಂತ್, ನೂತನ್‌ಗೌಡ, ಆರ್.ಕೃಷ್ಣೇಗೌಡ, ಅಲ್ಪಹಳ್ಳಿ ಡಿ.ಕೃಷ್ಣೇಗೌಡ, ಚಿಣ್ಯ ವೆಂಕಟೇಶ್, ಪ್ರಕಾಶ್, ಹನುಮಂತಯ್ಯ, ಹಂದೇನಹಳ್ಳಿ ಮಹದೇವ, ನಿಂಗರಾಜು, ಶಿವಣ್ಣ ಇತರರಿದ್ದರು.