- ಸಮನ್ವಯದಿಂದ ಕೆಲಸ ಮಾಡಲು ಕರೆ
- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ
ಗ್ರೇಟರ್ ಬೆಂಗಳೂರು ಪಾಲಿಕೆಯಲ್ಲಿ ಈ ಬಾರಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸದಿಂದ ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಸಮನ್ವಯದಿಂದ ಕೆಲಸ ಮಾಡಿ ಕಾಂಗ್ರೆಸ್‌ನ್ನು ಎದುರಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದರು.
ಜೆಪಿ ಭವನದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಗ್ರೇಟರ್ ಬೆಂಗಳೂರಿನ ಐದು ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆಯಾಗುವ ಸಾಧ್ಯತೆಯಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಟಿಕೆಟ್ ಆಕಾಂಕ್ಷಿಗಳು ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಚುನಾವಣೆಗೆ ಸಜ್ಜಾಗಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಆರಂಭವಾಗಿದ್ದು, ಬೆಂಗಳೂರು ನಗರವನ್ನು ಸರ್ಕಾರ ಎಟಿಎಂ ರೀತಿಯಲ್ಲಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗಿದ್ದು, ಕಸ ವಿಲೇವಾರಿ, ರಸ್ತೆ ನಿರ್ವಹಣೆ, ಮಳೆಗಾಲದ ಸಮಸ್ಯೆಗಳು ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳು ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ತೆರಿಗೆ ಮತ್ತು ವಿವಿಧ ಶುಲ್ಕಗಳನ್ನು ಹೆಚ್ಚಿಸಿ ಜನರ ಮೇಲೆ ಆರ್ಥಿಕ ಭಾರ ಹಾಕಲಾಗುತ್ತಿದೆ ಎಂದು ದೂರಿದರು.
ಟಿಕೆಟ್ ಪಡೆಯುವ ಆಸೆ ಮಾತ್ರ ಸಾಕಾಗುವುದಿಲ್ಲ. ಸ್ಪರ್ಧಿಸಲಿರುವ ವಾರ್ಡ್‌ನಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ಮನೆಮನೆಗೆ ಪಕ್ಷದ ಕಾರ್ಯಕ್ರಮಗಳು ಮತ್ತು ವಿಚಾರಧಾರೆ ತಲುಪಿಸುವುದು ಪ್ರತಿಯೊಬ್ಬ ಆಕಾಂಕ್ಷಿಯ ಜವಾಬ್ದಾರಿ ಎಂದರು.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸುವ ಉದ್ದೇಶದಿಂದ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಚಿಂತನೆ ಪಕ್ಷಕ್ಕಿದೆ ಎಂದು ಕುಮಾರಸ್ವಾಮಿ ಹೇಳಿದರು.
ಬೆಂಗಳೂರು ನಗರದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ಅದರಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮತದಾರರ ಪಟ್ಟಿಯ ಪರಿಷ್ಕರಣೆಗೆ ಗಮನಹರಿಸಬೇಕು. ಅಕ್ರಮ ಮತಗಳು ಉಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಸಂಸದ ಎಂ. ಮಲ್ಲೇಶ್ ಬಾಬು, ಗ್ರೇಟರ್ ಬೆಂಗಳೂರು ಪಾಲಿಕೆ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ ಮತ್ತು ಟಿ.ಎನ್. ಜವರಾಯಿಗೌಡ, ಮಾಜಿ ಶಾಸಕರಾದ ತಿಪ್ಪೇಸ್ವಾಮಿ ಹಾಗೂ ಅಖಂಡ ಶ್ರೀನಿವಾಸಮೂರ್ತಿ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಸೇರಿದಂತೆ ಐದು ವಿಭಾಗಗಳ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
*ಟಿಕೆಟ್ ಪಡೆಯುವ ಆಸೆ ಮಾತ್ರ ಸಾಕಾಗುವುದಿಲ್ಲ. ಸ್ಪರ್ಧಿಸಲಿರುವ ವಾರ್ಡ್‌ನಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ಮನೆಮನೆಗೆ ಪಕ್ಷದ ಕಾರ್ಯಕ್ರಮಗಳು ಮತ್ತು ವಿಚಾರಧಾರೆ ತಲುಪಿಸುವುದು ಪ್ರತಿಯೊಬ್ಬ ಆಕಾಂಕ್ಷಿಯ ಜವಾಬ್ದಾರಿ.
-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ