ಬೆಂಗಳೂರು: ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರು ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ, ಎಚ್ಡಿಕೆ ವಿರುದ್ಧ ಕಿಡಿಕಾರಿದರು.
ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ
ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ , ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.
ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.