Heavy Rain Alert 
ರಾಜ್ಯ

Heavy Rain Alert: ರಾಜ್ಯದ 7 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ(Heavy Rain Alert) ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಒಟ್ಟು 7 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಪಗ್ರಹ ಚಿತ್ರಣ ಹಾಗೂ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ. ವಿಶೇಷವಾಗಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಜಾರಿಗೊಳಿಸಿದೆ. ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.

ರಾಜಧಾನಿ ಬೆಂಗಳೂರಿಗೂ ವರುಣನ ಸಿಂಚನ!

ಇತ್ತ ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಿಂದ ತತ್ತರಿಸಿದ್ದ ರಾಜಧಾನಿಯ ಜನತೆಗೆ ಈ ಮಳೆ ತಂಪು ನೀಡಲಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲೂ ಚದುರಿದಂತೆ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ಇರುವುದರಿಂದ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಹಾಗೂ ಸಾರ್ವಜನಿಕರು ಗುಡುಗು-ಮಿಂಚಿನ ಸಂದರ್ಭದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹವಾಮಾನ ತಜ್ಞರು ಸಲಹೆ ನೀಡಿದ್ದಾರೆ.